ಬೆಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇತಿಹಾಸದ ವೀರ ಪುರುಷ ಕೋಟಿ-ಚೆನ್ನಯ್ಯರ ಹೆಸರು ನಾಮಕರಣ ಮಾಡಬೇಕೆಂದು ಒತ್ತಾಯಿಸಿ, ವಿಧಾನ ಪರಿಷತ್ತಿನ ಸಭಾನಾಯಕ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರನ್ನು ಅವಿಭಜಿತ ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಯ ಶಾಸಕರ ನಿಯೋಗ ಭೇಟಿ ಮಾಡಿ ಮನವಿ ಮಾಡಿತು.
ಸಿಎಂ ಕಚೇರಿಗೆ ಭೇಟಿ ನೀಡಿದ ನಿಯೋಗ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಡಪ್ರಭು ಕೆಂಪೇಗೌಡರ ಹೆಸರನ್ನು ಇಡಲಾಗಿದೆ. ಅದೇ ರೀತಿ ಕೋಟಿ-ಚೆನ್ನಯ್ಯರ ಹೆಸರನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಡಬೇಕೆಂದು ಮನವಿ ಮಾಡಿತು.
ನಿಯೋಗದಲ್ಲಿ ವಿಧಾನಸಭೆಯ ಮುಖ್ಯ ಸಚೇತಕ ಸುನೀಲ್ ಕುಮಾರ್, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಉಡುಪಿ ಶಾಸಕ ರಘುಪತಿ ಭಟ್, ಮೂಡುಬಿದರೆ ಶಾಸಕ ಉಮಾನಾಥ್ ಕೋಟ್ಯಾನ್, ಪುತ್ತೂರು ಶಾಸಕ ಸಂಜೀವ ಮಠಂದೂರ್, ಪುತ್ತೂರು, ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮುಂತಾದವರು ಉಪಸ್ಥಿತರಿದ್ದರು.