ಬೆಂಗಳೂರು: ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ನಡೆದಿದೆ ಎನ್ನಲಾದ ವಿಡಿಯೋ ಚಿತ್ರೀಕರಣ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ. ಈ ಬಗ್ಗೆ ಟ್ವೀಟ್ ಮೂಲಕ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. "ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ನಡೆಸಲಾಗಿದೆ ಎಂಬ ಆರೋಪವಿದ್ದು, ಇದು ಸೂಕ್ಷ್ಮ ಪ್ರಕರಣವಾಗಿರುವುದರಿಂದ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿಐಡಿಗೆ ವಹಿಸಿ ಆದೇಶಿಸಲಾಗಿದೆ" ಎಂದು ತಿಳಿಸಿದ್ದಾರೆ.
ಈ ಪ್ರಕರಣ ರಾಜಕೀಯವಾಗಿ ಭಾರಿ ಸದ್ದು ಮಾಡಿದೆ. ಬಿಜೆಪಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದೆ. ಉಭಯ ಪಕ್ಷಗಳ ನಡುವೆ ಆರೋಪ-ಪ್ರತ್ಯಾರೋಪಕ್ಕೂ ಕಾರಣವಾಗಿದೆ. ಬಿಜೆಪಿ ಈ ಪ್ರಕರಣವನ್ನು ಎಸ್ಐಟಿಗೆ ನೀಡಲು ಒತ್ತಾಯಿಸಿದೆ. ಪೊಲೀಸರು ಪಾರದರ್ಶಕವಾಗಿ ತನಿಖೆ ನಡೆಸುತ್ತಿಲ್ಲ ಎಂದು ಗಂಭೀರ ಆರೋಪ ಮಾಡಿದೆ. ಪ್ರಕರಣ ಬಯಲಿಗೆ ಬಂದ ಬಳಿಕವೂ ಉಡುಪಿ ಪೊಲೀಸರು ಎಫ್ಐಆರ್ ದಾಖಲಿಸಲು ವಿಳಂಬಿಸಿದ್ದು, ಗೃಹ ಸಚಿವ ಪರಮೇಶ್ವರ್ ಇದೊಂದು ತಮಾಷೆಗಾಗಿ ಮಾಡಿದ ಘಟನೆ ಎಂದು ಹೇಳಿದ್ದು ವಿವಾದಕ್ಕೆ ಕಾರಣವಾಗಿತ್ತು. ಈ ಹೇಳಿಕೆಗೆ ಬಿಜೆಪಿ ನಾಯಕರು ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದರು. ಎಸ್‌ಐಟಿ ತನಿಖೆ ನಡೆಸಲು ಸರ್ಕಾರಕ್ಕೆ ಆದೇಶ ನೀಡಬೇಕು ಎಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರ ನಿಯೋಗ ರಾಜ್ಯಪಾಲರಿಗೆ ಮನವಿ ಸಲ್ಲಿಸಿತ್ತು.
ಈ ವೇಳೆ ಮಾತನಾಡಿದ್ದ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, "ಸರ್ಕಾರವು ದುರಾದೃಷ್ಟಕ್ಕೆ ಡಿಎಸ್‍ಪಿ ಮಟ್ಟದ ಅಧಿಕಾರಿಯಿಂದ ತನಿಖೆ ನಡೆಸುತ್ತಿದೆ. ಸರ್ಕಾರದ ಒತ್ತಡವಿದ್ದರೆ ಡಿಎಸ್‍ಪಿ ಮಟ್ಟದ ಅಧಿಕಾರಿಯಿಂದ ಸಮರ್ಪಕ ತನಿಖೆ ಅಸಾಧ್ಯ. ಆದ್ದರಿಂದ ಎಸ್‍ಐಟಿ ತನಿಖೆಗೆ ನಾವು ಆಗ್ರಹಿಸುತ್ತೇವೆ. ಗೃಹ ಸಚಿವರು ಇದೊಂದು ತಮಾಷೆಯ ವಿಷಯ ಎಂಬಂತೆ ಮಾತನಾಡಿದ್ದಾರೆ. ಮುಖ್ಯಮಂತ್ರಿಗಳು ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ. ಸರಕಾರವೂ ಮೀನಮೇಷ ಎಣಿಸುತ್ತಿದೆ" ಎಂದು ಟೀಕಿಸಿದ್ದರು.
ಕಾಲೇಜಿನ ಶೌಚಾಲಯದಲ್ಲಿ ಹಿಂದೂ ಯುವತಿಯ ವಿಡಿಯೋ ಮಾಡಿದ ಆರೋಪದ ಮೇಲೆ ಶಬನಾಜ್, ಆಲ್ಫಿಯಾ, ಆಲಿಮಾತುಲ್ ಶಾಫಿಯಾ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಮೂವರು ಆರೋಪಿಗಳು ಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ.
ಇದನ್ನೂ ಓದಿ : ಉಡುಪಿ ವಿಡಿಯೋ ಪ್ರಕರಣ: SIT ತನಿಖೆಗೆ ಆದೇಶಿಸುವಂತೆ ರಾಜ್ಯಪಾಲರಿಗೆ ಬಿಜೆಪಿ ನಿಯೋಗ ಮನವಿ