ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಚಿವ ಉಮೇಶ್ ಕತ್ತಿ ನಿಧನಕ್ಕೆ ಸಂತಾಪ ಸೂಚಿಸಿದ್ದು, "ಉಮೇಶ್ ಕತ್ತಿ ಅವರ ಅಕಾಲಿಕ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಅವರ ನಿಧನದಿಂದ ರಾಜ್ಯ ಓರ್ವ ನುರಿತ ಮುತ್ಸದ್ಧಿ, ಕ್ರಿಯಾಶೀಲ ಮುಖಂಡ ಹಾಗೂ ನಿಷ್ಠಾವಂತ ಜನಸೇವಕನನ್ನು ಕಳೆದುಕೊಂಡಿದೆ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ" ಎಂದು ಟ್ವೀಟ್ ಮಾಡಿದ್ದಾರೆ.
ತೀವ್ರ ದುಃಖವಾಗಿದೆ- ಸಿದ್ದರಾಮಯ್ಯ: "ಸಚಿವರಾದ ಉಮೇಶ್ ಕತ್ತಿ ಅವರ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ" ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಸುದ್ದಿ ಕೇಳಿ ಆಘಾತ- ಸಚಿವ ನಿರಾಣಿ: "ಉಮೇಶ್ ಕತ್ತಿ ಅವರ ಅಕಾಲಿಕ ನಿಧನದ ಸುದ್ದಿ ಕೇಳಿ ಮನಸ್ಸಿಗೆ ತೀವ್ರ ಆಘಾತವಾಯಿತು. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ" ಎಂದು ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.
ನೇರ ನುಡಿಯ ನಾಯಕ- ಪ್ರತಾಪ್ ಸಿಂಹ: ಬಾಯಿ ಮತ್ತು ಹೃದಯದ ಮಧ್ಯೆ ಫಿಲ್ಟರ್ ಇಲ್ಲದೆ, ಮನಸ್ಸಿಗೆ ಅನ್ನಿಸಿದ್ದನ್ನು ನೇರವಾಗಿ ಹೇಳುತ್ತಿದ್ದ ನೇರನುಡಿಯ ನಾಯಕ, ಸಚಿವ ಉಮೇಶ್ ಕತ್ತಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಭಾವಪೂರ್ಣ ಶ್ರದ್ಧಾಂಜಲಿ ಎಂದು ಸಂಸದ ಪ್ರತಾಪ್ ಸಿಂಹ ಸಂತಾಪ ಸೂಚಿಸಿದ್ದಾರೆ.
ನಿಷ್ಠಾವಂತ ಜನಸೇವಕ- ಸದಾನಂದ ಗೌಡ: "ನನ್ನ ಆಪ್ತರಾದ ಉಮೇಶ್ ಕತ್ತಿ ಅವರ ಅಕಾಲಿಕ ನಿಧನದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ. ರಾಜ್ಯ ಓರ್ವ ನುರಿತ ಮುತ್ಸದ್ಧಿ, ಕ್ರಿಯಾಶೀಲ ಹಾಗೂ ನಿಷ್ಠಾವಂತ ಜನಸೇವಕನನ್ನು ಕಳೆದುಕೊಂಡಿದೆ" ಎಂದು ಮಾಜಿ ಕೇಂದ್ರ ಸಚಿವ, ಸಂಸದ ಸದಾನಂದ ಗೌಡ ಟ್ವೀಟ್ ಮಾಡಿದ್ದಾರೆ.
ಉ.ಕರ್ನಾಟಕ ಭಾಗದ ಜನತೆಯ ಧ್ವನಿ- ಆರಗ ಜ್ಞಾನೇಂದ್ರ: ವಿಧಾನಸಭೆಯ ಅತ್ಯಂತ ಹಿರಿಯ ಸದಸ್ಯರುಗಳಲ್ಲಿ ಒಬ್ಬರಾಗಿದ್ದ ಕತ್ತಿ ಅವರು ಅತ್ಯಂತ ಅನುಭವಿ ಹಾಗೂ ಉತ್ಸಾಹಿ ರಾಜಕಾರಣಿಯಾಗಿದ್ದರು. ಉತ್ತರ ಕರ್ನಾಟಕ ಭಾಗದ ಜನತೆಯ ಧ್ವನಿಯಾಗಿದ್ದರು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸಂತಾಪ ತಿಳಿಸಿದ್ದಾರೆ.
ನಳಿನ್ ಕುಮಾರ್ ಕಟೀಲ್ ಸಂತಾಪ: ಸಚಿವರಾದ ಉಮೇಶ್ ಕತ್ತಿಯವರ ನಿಧನದ ಸುದ್ದಿ ತಿಳಿದು ದುಃಖವಾಯಿತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ.
ತುಂಬಲಾರದ ನಷ್ಟ- ಸಿ.ಟಿ ರವಿ ಸಂತಾಪ: ಕತ್ತಿ ಅವರ ಅಗಲಿಕೆ ಬಿಜೆಪಿ ಪಕ್ಷಕ್ಕೆ ಹಾಗೂ ರಾಜ್ಯದ ಜನತೆಗೆ ತುಂಬಲಾರದ ನಷ್ಟ ಎಂದು ಸಿ.ಟಿ.ರವಿ ತಿಳಿಸಿದ್ದಾರೆ.
ಇದನ್ನೂ ಓದಿ: ಹೃದಯಾಘಾತದಿಂದ ಸಚಿವ ಉಮೇಶ್ ಕತ್ತಿ ವಿಧಿವಶ