ಬೆಂಗಳೂರು: ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆರಂಭವಾಗಿದ್ದು, ಪಕ್ಷದ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ಆರಂಭವಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಡಿಸಿಎಂ ಜಿ. ಪರಮೇಶ್ವರ್, ಮಾಜಿ ಸಚಿವ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ವಿಧಾನಪರಿಷತ್ ಮುಖ್ಯಸಚೇತಕ ನಾರಾಯಣಸ್ವಾಮಿ, ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಸೇರಿದಂತೆ ಹಲವು ಶಾಸಕರು ಸಭೆಗೆ ಆಗಮಿಸಿದ್ದಾರೆ.
ವಿವಿಧ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸಲು ಶಾಸಕಾಂಗ ಸಭೆ ಕರೆಯಲಾಗಿದ್ದು, ಒಂದು ಗಂಟೆಗೂ ಹೆಚ್ಚು ಕಾಲ ಸಭೆ ನಡೆಯುವ ಸಾಧ್ಯತೆ ಇದೆ. ಬೆಳಗ್ಗೆ 11 ಗಂಟೆಗೆ ಜಂಟಿ ಸದನವನ್ನುದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿರುವ ಹಿನ್ನೆಲೆ 10.30 ರ ಒಳಗೆ ಶಾಸಕಾಂಗ ಸಭೆ ಪೂರ್ಣಗೊಳಿಸಬೇಕಾಗಿದೆ.
ಓದಿ:ನಾಲ್ಕು ವರ್ಷಗಳ ಸಜೆಯಲ್ಲಿದ್ದ ಶಶಿಕಲಾಗೆ ಬಂದಿದ್ದ ಪತ್ರಗಳೆಷ್ಟು ಗೊತ್ತಾ?
ಸರ್ಕಾರದ ವಿರುದ್ಧ ಕೈಗೊಳ್ಳಬಹುದಾದ ಹೋರಾಟಗಳು, ಆಡಳಿತ ಯಂತ್ರ ಸ್ಥಗಿತ, ಸರ್ಕಾರದ ಭ್ರಷ್ಟಾಚಾರ ಸೇರಿದಂತೆ ಹಲವು ವಿಚಾರಗಳ ಚರ್ಚೆಯನ್ನು ಇಂದಿನ ಶಾಸಕಾಂಗ ಸಭೆಯಲ್ಲಿ ಕಾಂಗ್ರೆಸ್ ನಾಯಕರು ನಡೆಸಲಿದ್ದಾರೆ. ಅತ್ಯಂತ ಮಹತ್ವದ ವಿಚಾರಗಳ ಚರ್ಚೆಯ ಬಳಿಕ ಕಲಾಪದಲ್ಲಿ ಪಕ್ಷದ ಮುಖಂಡರು ಹಾಗೂ ಶಾಸಕರು ನಡೆದುಕೊಳ್ಳಬೇಕಾದ ನಿಲುವುಗಳ ಕುರಿತು ಚರ್ಚೆ ನಡೆಯಲಿದೆ.
ವಿವಿಧ ವಿಚಾರಗಳಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಹಾಗೂ ಹಲವು ಮಹತ್ವದ ವಿಚಾರಗಳಲ್ಲಿ ಸರ್ಕಾರದ ತಪ್ಪುಗಳನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಇಂದು ಶಾಸಕಾಂಗ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ.