ಬೆಂಗಳೂರು: ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಇಂದು ಎಲ್ಲಾ ರಾಜ್ಯಗಳ ಲೋಕೋಪಯೋಗಿ ಸಚಿವರು ಹಾಗೂ ಸಾರಿಗೆ ಸಚಿವರೊಂದಿಗೆ ವಿಡಿಯೋ ಸಂವಾದ ನಡೆಸಿದ್ದಾರೆ.
ಅದೇ ರೀತಿ ರಾಜ್ಯದ ಲೋಕೋಪಯೋಗಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರೊಂದಿಗೂ ವಿಡಿಯೋ ಸಂವಾದ ನಡೆಸಿದ ಗಡ್ಕರಿ, ಹಲವು ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ.
ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದ ಯೋಜನೆಗಳು ಮತ್ತು ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಗಳ ಕುರಿತು ವಿವರಣೆ ನೀಡಿರುವ ಡಿಸಿಎಂ, ಕೇಂದ್ರದಿಂದ ಬಿಡುಗಡೆಯಾಗಬೇಕಿರುವ ಅನುದಾನವನ್ನು ಶೀಘ್ರ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. ನಂತರ ಸಾರಿಗೆ ಇಲಾಖೆಗೆ ಸಂಬಂಧಿಸಿದಂತೆ ಕೆಲ ಮಾಹಿತಿಯನ್ನು ಲಕ್ಷ್ಮಣ ಸವದಿ ಅವರು ನೀಡಿದರು.
ಲೋಕೋಪಯೋಗಿ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್, ಕಾರ್ಯದರ್ಶಿ ಬಿ. ಗುರುಪ್ರಸಾದ್, ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವಗುಪ್ತ, ಕೆಎಸ್ ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಸೇರಿದಂತೆ ಮತ್ತಿತರ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.