ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ 2009ರ ಸೆ.29ರ ನಂತರ ಸಾರ್ವಜನಿಕ ಸ್ಥಳಗಳನ್ನು ಒತ್ತುವರಿ ಮಾಡಿ 277 ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ನಿರ್ಮಿಸಲಾಗಿದೆ ಎಂದು ಪಾಲಿಕೆ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.
ಈ ಸಂಬಂಧ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಹಾಗೂ ಕೆಲ ವಕೀಲರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಬಿಬಿಎಂಪಿ ಪರ ವಕೀಲರು ಲಿಖಿತ ಹೇಳಿಕೆ ಸಲ್ಲಿಸಿ, ಬಿಬಿಎಂಪಿ ವ್ಯಾಪ್ತಿಯಲ್ಲಿ 277 ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ಗುರುತಿಸಲಾಗಿದೆ. ಈವರೆಗೆ 4 ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸಲಾಗಿದೆ. ಉಳಿದವುಗಳನ್ನು ಬಿಬಿಎಂಪಿ ಹೊಸ ಕಾಯ್ದೆ ಪ್ರಕಾರ ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಹೇಳಿಕೆ ದಾಖಲಿಸಿಕೊಂಡ ಪೀಠ, ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವಿಗೆ ಕೈಗೊಳ್ಳುವ ಕ್ರಮಗಳ ವಿವರಗಳನ್ನು ಸಲ್ಲಿಸುವಂತೆ ಬಿಬಿಎಂಪಿ ಪರ ವಕೀಲರಿಗೆ ಸೂಚಿಸಿ ವಿಚಾರಣೆಯನ್ನು ಮಾ.29ಕ್ಕೆ ಮುಂದೂಡಿತು.
ಇದೇ ವೇಳೆ ಸರ್ಕಾರದ ಪರ ವಕೀಲರು ವಾದ ಮಂಡಿಸಿ ಈವರೆಗೆ ರಾಜ್ಯದ ವಿವಿಧ 21 ಜಿಲ್ಲೆಗಳಿಂದ ಅನಧಿಕೃತ ಧಾರ್ಮಿಕ ಕಟ್ಟಡಗಳ ಮಾಹಿತಿ ಸಂಗ್ರಹಿಸಲಾಗಿದೆ. ಉಳಿದ ಜಿಲ್ಲೆಗಳಿಂದ ಮಾಹಿತಿ ಬರಬೇಕಿದೆ ಎಂದರು.
ಇದಕ್ಕೆ ಪ್ರತಿಕ್ರಿಯಿಸಿದ ಪೀಠ ಎಲ್ಲ ಮಾಹಿತಿಯನ್ನು ಕ್ರೂಢೀಕರಿಸಿ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸೂಚಿಸಿತು.