ಬೆಂಗಳೂರು: ಕೋವಿಡ್ 19 ಹಿನ್ನೆಲೆಯಲ್ಲಿ ಸೋಂಕಿತರ ಸಂಪರ್ಕಗಳನ್ನು ಪತ್ತೆಹಚ್ಚಲು ರೂಪಿಸಿರುವ ಅರೋಗ್ಯ ಸೇತು ಮೊಬೈಲ್ ಆ್ಯಪ್ ಅನ್ನು ಸ್ವಯಿಚ್ಛೆಯಿಂದ ಬಳಸುತ್ತಿರುವವರ ಖಾಸಗಿ ಮಾಹಿತಿಗಳ ದತ್ತಾಂಶವನ್ನು ಸರ್ಕಾರ ಬಳಸಿಕೊಳ್ಳುತ್ತದೆಯೇ ಎಂಬುದರ ಕುರಿತು ಸ್ಪಷ್ಟನೆ ನೀಡುವಂತೆ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿದೆ.
ಆರೋಗ್ಯ ಸೇತು ಆ್ಯಪ್ ಬಳಕೆ ಪ್ರಶ್ನಿಸಿ ನಗರದ ಅನಿವರ್ ಎಂಬುವವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಆ್ಯಪ್ ಬಳಕೆ ಮಾಡಿದವರಿಗೆ ಸರ್ಕಾರಿ ಸೌಲಭ್ಯಗಳನ್ನು ನಿರಾಕರಿಸದಂತೆ ಹಾಗೂ ಆ್ಯಪ್ ಬಳಸುತ್ತಿರುವ ನಾಗರೀಕರ ಮಾಹಿತಿ ಇಳಗೊಂಡ ದತ್ತಾಂಶವನ್ನು ಅನ್ಯ ಉದ್ದೇಶಗಳಿಗೆ ಬಳಕೆ ಮಾಡದಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಪೀಠ ಆ್ಯಪ್ ಬಳಕೆ ಐಚ್ಛಿಕ ಆಗಿರುವುದರಿಂದ ಸೇವೆಗಳನ್ನು ನಿರಾಕರಿಸುವ ಪ್ರಶ್ನೆ ಉದ್ಭವಿಸುವುದಿಲ್ಲ. ಆದರೆ ಸ್ವಯಿಚ್ಛೆಯಿಂದ ಬಳಸುತ್ತಿರುವವರ ಮಾಹಿತಿಯನ್ನು ಒಳಗೊಂಡ ದತ್ತಾಂಶವನ್ನು ಸರ್ಕಾರ ಅನ್ಯ ಉದ್ದೇಶಗಳಿಗೆ ಬಳಸುತ್ತದೆಯೇ? ಒಂದು ವೇಳೆ ಬಳಸುವುದೇ ಆದಲ್ಲಿ ಯಾವ ಕಾನೂನಿನ ಅಡಿಯಲ್ಲಿ ಬಳಕೆ ಮಾಡಿಕೊಳ್ಳುತ್ತದೆ ಎಂಬುದರ ಕುರಿತು ಸ್ಪಷ್ಟನೆ ನೀಡುವಂತೆ ಕೇಂದ್ರದ ಪರ ವಕೀಲರಿಗೆ ನಿರ್ದೇಶಿಸಿ ವಿಚಾರಣೆಯನ್ನು ಅಕ್ಟೋಬರ್ 5ಕ್ಕೆ ಮುಂದೂಡಿತು.