ಬೆಂಗಳೂರು : ವಾಲ್ಮೀಕಿ ಸಮುದಾಯಕ್ಕೆ ಶೇ. 7.5ರಷ್ಟು ಮೀಸಲಾತಿ ನೀಡುವ ಸಂಬಂಧ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ವಾಲ್ಮೀಕಿ ಸಮುದಾಯದ ನಿಯೋಗ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದೆ.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ವಾಲ್ಮೀಕಿ ಸಮುದಾಯದ ನಿಯೋಗ ಭೇಟಿ ನೀಡಿತು. ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ, ಬಳ್ಳಾರಿ ಸಂಸದ ದೇವೇಂದ್ರಪ್ಪ, ಹೆಚ್ ಡಿ ಕೋಟೆ ಶಾಸಕ ಅನಿಲ್ ಚಿಕ್ಕಮಾದು, ಚಳ್ಳಕೆರೆ ಶಾಸಕ ರಘುಮೂರ್ತಿ ಜಗಳೂರು, ಶಾಸಕ ರಾಮಚಂದ್ರ ಹಾಗೂ ಸಮುದಾಯದ ಮುಖಂಡರು ಭಾಗಿಯಾಗಿದ್ದರು.
ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದ ನಿಯೋಗ, ರಾಜ್ಯದಲ್ಲಿ ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ವಿಚಾರ ಸಂಬಂಧ ಮಾತುಕತೆ ನಡೆಸಿತು. ಈ ಹಿಂದೆ ಹೋರಾಟದ ಹಾದಿ ಹಿಡಿದಾಗ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಸಭೆ ನಡೆದಿತ್ತು. ಆ ವೇಳೆ ನ್ಯಾ.ನಾಗಮೋಹನ್ ದಾಸ್ ವರದಿ ಬಂದ ನಂತರ ನಿರ್ಧಾರ ಕೈಗೊಳ್ಳುವ ಭರವಸೆ ನೀಡಲಾಗಿತ್ತು. ಅದರಂತೆ ಈಗ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ಹಾಗಾಗಿ ವಾಲ್ಮೀಕಿ ಸಮುದಾಯದ ಮೀಸಲಾತಿ ಪರಿಷ್ಕರಣೆ ಮಾಡುವ ಸಂಬಂಧ ಸರ್ಕಾರ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಿತು.
ಮನವಿ ಆಲಿಸಿದ ಸಿಎಂ ಎಲ್ಲವನ್ನೂ ಪರಾಮರ್ಶೆ ಮಾಡಿ ಸೂಕ್ತ ನಿರ್ಧಾರ ಕೈಗೊಳ್ಳುವ ಭರವಸೆ ನೀಡಿದರು ಎಂದು ತಿಳಿದು ಬಂದಿದೆ.