ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ್ ಸಾವರ್ಕರ್ ಅವರನ್ನು ನಾಥೂರಾಮ್ ಗೋಡ್ಸೆಗೆ ಹೋಲಿಕೆ ಮಾಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೂಡಲೇ ನಾಡಿನ ಜನತೆಯ ಕ್ಷಮೆ ಯಾಚಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ.
ಸಾವರ್ಕರ್ ಕುರಿತು ಸಿದ್ದರಾಮಯ್ಯ ಹೇಳಿಕೆ ಖಂಡಿಸಿದ ಸಿಎಂ, ದಾಮೋದರ್ ಸಾವರ್ಕರ್ ಕುರಿತು ಸಿದ್ದರಾಮಯ್ಯ ಲಘುವಾಗಿ ಹೇಳಿಕೆ ನೀಡಿರುವುದು ಸರಿಯಲ್ಲ. ವೀರ ಸಾವರ್ಕರ್ ಒಬ್ಬ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ, ಅಪ್ಪಟ ದೇಶ ಪ್ರೇಮಿ, ಅವರಿಗೆ ಭಾರತ ರತ್ನ ನೀಡುವ ಬಗ್ಗೆ ಕೆಲ ಕಾಂಗ್ರೆಸ್ಸಿಗರು ಬೆಂಬಲ ಸೂಚಿಸಿದ್ದಾರೆ. ಆದರೆ ಸಿದ್ದರಾಮಯ್ಯ ಮಾತ್ರ ನಾಥೂರಾಮ್ ಗೋಡ್ಸೆಗೆ ಹೋಲಿಸಿದ್ದಾರೆ. ಇವರ ಈ ಹೇಳಿಕೆ ಕೀಳು ಅಭಿರುಚಿಯ ಪ್ರತೀಕ, ಹೀಗಾಗಿ ಸಿದ್ದರಾಮಯ್ಯ ನಾಡಿನ ಜನತೆಯ ಮುಂದೆ ಕ್ಷಮೆ ಕೇಳಬೇಕು ಎಂದು ಮಾಧ್ಯಮ ಹೇಳಿಕೆ ಮೂಲಕ ಒತ್ತಾಯಿಸಿದರು.
ಸ್ವಾತಂತ್ರ್ಯ ಹೋರಾಟಗಾರರ ಕುರಿತು ಇಂತಹ ಹೇಳಿಕೆ ಪ್ರಚಾರ ಗಿಟ್ಟಿಸಿಕೊಳ್ಳುವ ಹುನ್ನಾರ ಸಿದ್ದರಾಮಯ್ಯಗೆ ಶೋಭೆ ತರುವುದಿಲ್ಲ, ಅವರು ತಮ್ಮ ಘನತೆಗೆ ತಕ್ಕಂತೆ ನಡೆದುಕೊಳ್ಳಬೇಕು. ಈ ರೀತಿ ಅಸಂಬದ್ಧವಾಗಿ ಹೇಳೀಕೆ ನೀಡಿ ತಾನೊಬ್ಬ ಉತ್ತಮ ವಾಗ್ಮಿ, ಬುದ್ದಿವಂತ ಎಂದು ಭಾವಿಸಿದ್ದರೆ ಅದು ಅವರ ಭ್ರಮೆ ಎಂದು ಮಾಧ್ಯಮ ಪ್ರಕಟಣೆ ಮೂಲಕ ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದಾರೆ.