ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಜಯಂತಿ (76) ವಿಧಿವಶರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಜಯಂತಿ ಇಂದು ಅವರ ಬೆಂಗಳೂರು ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಕೆಲವು ದಿನಗಳ ಹಿಂದಷ್ಟೇ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಜಯಂತಿಯವರಿಗೆ ವಿಕ್ರಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಇಂದು ಮುಂಜಾನೆ ನಾಲ್ಕು ಗಂಟೆ ಸುಮಾರಿಗೆ ಅಮ್ಮ ಬನಶಂಕರಿಯ ನಮ್ಮ ಮನೆಯಲ್ಲಿ ಮೃತಪಟ್ಟಿದ್ದಾರೆ ಎಂದು ಜಯಂತಿ ಪುತ್ರ ಕೃಷ್ಣ ಕುಮಾರ್ ಈಟಿವಿ ಭಾರತಕ್ಕೆ ಮಾಹಿತಿ ನೀಡಿದ್ದಾರೆ.
ಜಯಂತಿ ಪಾರ್ಥಿವ ಶರೀರವನ್ನು ರವೀಂದ್ರ ಕಲಾ ಕ್ಷೇತ್ರದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲು ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ಗಂಟೆವರೆಗೆ ಅಂತಿಮ ದರ್ಶನಕ್ಕೆ ಅವಕಾಶವಿರಲಿದೆ. ಬನಶಂಕರಿಯ ಚಿತಾಗಾರದಲ್ಲಿ ಸಂಜೆ 5 ಗಂಟೆ ಸುಮಾರಿಗೆ ಅಂತಿಮ ವಿಧಿವಿಧಾನ ನೆರವೇರಿಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.
ಇದನ್ನೂ ಓದಿ: ಕಳಚಿತು ಚಿತ್ರರಂಗದ ಮತ್ತೊಂದು ಕೊಂಡಿ.. ಜಯಂತಿ ಜೀವನ ಪಯಣ ಹೇಗಿತ್ತು?
1945 ಜನವರಿ 6 ರಂದು ಬಳ್ಳಾರಿಯಲ್ಲಿ ಜನಿಸಿದ್ದ ಜಯಂತಿಯವರು ಕನ್ನಡ, ತೆಲುಗು, ತಮಿಳು, ಮರಾಠಿ, ಹಿಂದಿ ಮತ್ತು ಮಲಯಾಳಂ ಭಾಷೆಯ ಒಟ್ಟು 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಡಾ. ರಾಜ್ಕುಮಾರ್ ಜತೆಯಲ್ಲಿ 45 ಚಿತ್ರಗಳಲ್ಲಿ ಅಭಿನಯಿಸಿದ್ದರು. ಎಡಕಲ್ಲು ಗುಡ್ಡದ ಮೇಲೆ ಇವರ ಪ್ರಸಿದ್ಧ ಚಿತ್ರವಾಗಿದೆ.