ಬೆಂಗಳೂರು: ಕಾಂಗ್ರೆಸ್ ಆರೋಪದ ಬೆನ್ನಲ್ಲೇ ಚಿಲುಮೆ ಸಂಸ್ಥೆಗೆ ನೀಡಿದ್ದ ಅನುಮತಿಯನ್ನು ಬಿಬಿಎಂಪಿ ರದ್ದು ಮಾಡಿ, ಎಫ್ಐಆರ್ ದಾಖಲಿಸಿದೆ.
ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆ ಮತ್ತು ಕಾಡುಗೋಡಿ ಪೊಲೀಸ್ ಠಾಣೆಗಳಲ್ಲಿ ಬಿಬಿಎಂಪಿ ದೂರು ದಾಖಲಿಸಿದೆ. ಅಲ್ಲದೇ ಮತದಾರರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸುತ್ತಿರುವ ದೂರಿನ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಿ ವಿಚಾರಣೆ ನಡೆಸಿ ವರದಿ ನೀಡಲು ಬಿಬಿಎಂಪಿ ಮುಖ್ಯ ಆಯುಕ್ತರಾಗಿರುವ ತುಷಾರ್ ಗಿರಿನಾಥ್ ಸೂಚನೆ ನೀಡಿದ್ದಾರೆ.
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯಚಟುವಟಿಕೆಗಳ ಕುರಿತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ನಿರ್ವಹಿಸಲು, ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಗೆ ಷರತ್ತುಬದ್ಧ ಅನುಮತಿಯನ್ನು ನೀಡಲಾಗಿತ್ತು. ಮತದಾರರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸುತ್ತಿರುವ ಬಗ್ಗೆ ದೂರು ಬಂದಿದ್ದರ ಹಿನ್ನೆಲೆಯಲ್ಲಿ ಷರತ್ತು ಉಲ್ಲಂಘಿಸಿರುವುದನ್ನು ಪರಿಗಣಿಸಿ ಅನುಮತಿ ಪತ್ರವನ್ನು ರದ್ದುಪಡಿಸಲಾಗಿದೆ. ಮಾಹಿತಿ ಸಂಗ್ರಹಣೆ ಕುರಿತು ಅನುಮಾನ ಬಂದಿದ್ದರ ಹಿನ್ನೆಲೆಯಲ್ಲಿ ಚಿಲುಮೆ ಸಂಸ್ಥೆಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲು ದೂರು ಸಹ ದಾಖಲಿಸಲಾಗಿದೆ ಎಂದು ಬಿಬಿಎಂಪಿ ತಿಳಿಸಿದೆ.
(ಓದಿ: ಮತದಾರರ ಸಮೀಕ್ಷೆ ಹೆಸರಿನಲ್ಲಿ ಖಾಸಗಿತನಕ್ಕೆ ಕನ್ನ ಆರೋಪ.. ನಗರ ಪೊಲೀಸ್ ಆಯುಕ್ತರಿಗೆ ಕಾಂಗ್ರೆಸ್ ದೂರು)