ಬೆಂಗಳೂರು: ರಾಜ್ಯದ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಹೆಚ್ಚಿನ ಕಾನೂನು ಜಾಗೃತಿ ಮೂಡಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲು ಸಿದ್ದತೆ ಮಾಡಿಕೊಂಡಿದ್ದೇವೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹೈಕೋರ್ಟ್‌ಗೆ ತಿಳಿಸಿದ್ದಾರೆ.
ರಾಜ್ಯದಲ್ಲಿ ಬಾಲ ನ್ಯಾಯ (ಮಕ್ಕಳ ಕಾಳಜಿ ಹಾಗೂ ಸುರಕ್ಷತೆ) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ, ಸರ್ಕಾರದ ಪರ ಹಾಜರಿದ್ದ ಹೆಚ್ಚುವರಿ ಆಡ್ವಕೇಟ್ ಜನರಲ್ ಧ್ಯಾನ್ ಚಿನ್ನಪ್ಪ ಅವರು, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರ ಪ್ರಮಾಣ ಪತ್ರವನ್ನು ಪೀಠಕ್ಕೆ ಸಲ್ಲಿಸಿದರು.
ಪ್ರಮಾಣ ಪತ್ರದ ಸಾರಾಂಶ: ಎಸ್ಪಿ, ಡಿವೈಎಸ್ಪಿ ಹಂತದ ಅಧಿಕಾರಿಗಳೂ ಸೇರಿದಂತೆ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಕಾನೂನಿನ ಕುರಿತು ಜಾಗೃತಿ ಮೂಡಿಸಲು ಕರ್ನಾಟಕ ನ್ಯಾಯಾಂಗ ಅಕಾಡೆಮಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಈ ಸಂಬಂಧ ಈಗಾಗಲೇ ಅಡ್ವೋಕೇಟ್ ಜನರಲ್ ಅವರ ಕಚೇರಿಗೆ ಪತ್ರ ಬರೆಯಲಾಗಿದೆ. ಕಾರ್ಯಕ್ರಮದ ದಿನಾಂಕ ಮತ್ತು ಸಮಯವನ್ನು ಶೀಘ್ರದಲ್ಲೇ ಅಂತಿಮಗೊಳಿಸಲಾಗುವುದು. ಸಂಜ್ಞೆಯ ಅಥವಾ ಕಾಗ್ನಿಜಬಲ್ ಪ್ರಕರಣಗಳಲ್ಲಿ ಎಫ್‌ಐಆರ್ ದಾಖಲಿಸುವ ಸಂಬಂಧ ಸುಪ್ರೀಂಕೋರ್ಟ್‌ನ ನಿರ್ದೇಶನದಂತೆ 2014ರಲ್ಲಿ ಹೊರಡಿಸಲಾದ ಸುತ್ತೋಲೆಯನ್ನು 2020 ಮಾ.3 ರಂದು ರಾಜ್ಯದ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಕಳುಹಿಸಿಕೊಡಲಾಗಿದ್ದು, ಸೂಚನೆಗಳನ್ನು ನೀಡಲಾಗಿದೆ. ಯಾವುದೇ ದೂರು ಕಾಗ್ನಿಜೆಬಲ್ ಪ್ರಕರಣ ಎಂದು ಮೇಲ್ನೋಟಕ್ಕೆ ಖಚಿತವಾದರೆ ಠಾಣಾಧಿಕಾರಿ ತಡ ಮಾಡದೇ ಎಫ್‌ಐಆರ್ ದಾಖಲಿಸಿಕೊಳ್ಳಬೇಕು. ಅದೇ ರೀತಿ ಅಸಂಜ್ಜೆಯ ಅಥವಾ ನಾನ್ ಕಾಗ್ನಿಜೆಬಲ್ ಪ್ರಕರಣ ಎಂದು ಮೇಲ್ನೋಟಕ್ಕೆ ತಿಳಿದು ಬಂದರೆ ದೂರುದಾರರು ಅಥವಾ ಮಾಹಿತಿದಾರರಿಗೆ ‘ಸ್ವೀಕೃತಿ’ ಕೊಡಬೇಕು. ಇಂತಹ ಸಂದರ್ಭಗಳಲ್ಲಿ ಪ್ರಕರಣ ಯಾವ ಮಾದರಿಯದ್ದು ಎಂಬುದನ್ನು ಖಾತರಿಪಡಿಸಿಕೊಳ್ಳಲು ಕಾರ್ಯಾಗಾರ ನಡೆಸಲಾಗುತ್ತದೆ. ಈ ಸಂಬಂಧ ಠಾಣಾಧಿಕಾರಿಗಳಿಗೆ ಕಾರ್ಯಾಗಾರ ಏರ್ಪಡಿಸಿ ಕಾನೂನು ಕುರಿತು ಹೆಚ್ಚಿನ ಜಾಗೃತಿ ಮೂಡಿಸಿದ ನಂತರವೂ, ಲೋಪ ಎಸಗಿದರೆ ತಪ್ಪಿತಸ್ಥ ಠಾಣಾಧಿಕಾರಿ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಮಾಣಪತ್ರದಲ್ಲಿ ವಿವರಿಸಲಾಗಿದೆ.