ಬೆಂಗಳೂರು: ಹೃದಯಾಘಾತದಿಂದ ನಿಧನರಾದ ಸ್ಯಾಂಡಲ್ವುಡ್ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಪದ್ಮಶ್ರೀ ಪ್ರಶಸ್ತಿಗೆ ಶಿಫಾರಸು ಮಾಡುವ ಸಂಬಂಧ ಸೂಕ್ತ ಸಮಯದಲ್ಲಿ ಚರ್ಚೆ ನಡೆಸಿ ನಿರ್ಧರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಆರ್ಟಿ ನಗರ ನಿವಾಸದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದಿನ ಸಚಿವ ಸಂಪುಟ ಸಭೆಯಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳಿಗೆ ನಿರ್ಣಯ ಮಾಡಲಾಗುತ್ತದೆ ಎಂದರು.
ರಾಜ್ ಕುಟುಂಬಸ್ಥರು ಅಪ್ಪು ಪುಣ್ಯಸ್ಮರಣೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದಾರೆ. ಹಾಗಾಗಿ ಸಚಿಚ ಸಂಪುಟ ಸಭೆ ನಡೆದ ಬಳಿಕ ಕಾರ್ಯಕ್ರಮದಲ್ಲಿ ನಾನು ಭಾಗವಹಿಸುತ್ತಿದ್ದೇನೆ ಎಂದು ಸಿಎಂ ತಿಳಿಸಿದರು.
ಪುನೀತ್ ರಾಜ್ ಕುಮಾರ್ಗೆ ಪದ್ಮಶ್ರೀ ನೀಡುವುದು ಸೇರಿದಂತೆ ಎಲ್ಲವನ್ನೂ ಸೂಕ್ತ ಸಮಯದಲ್ಲಿ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ. ಪ್ರಶಸ್ತಿ ಶಿಫಾರಸ್ಸಿಗೆ ನಿಯಮಾವಳಿವೆ. ಅದರ ಪ್ರಕಾರ ಎಲ್ಲವನ್ನು ತೀರ್ಮಾನ ಮಾಡಲಾಗುತ್ತದೆ. ಅವರ ಕುಟುಂಬ ಸದಸ್ಯರ ಜೊತೆಯಲ್ಲೂ ಚರ್ಚಿಸಿ ನಿರ್ಧರಿಸಲಾಗುತ್ತದೆ ಎಂದು ಸಿಎಂ ಸ್ಪಷ್ಟಪಡಿಸಿದರು.
ಇದನ್ನೂ ಓದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆ ಭಾರಿ ಮಳೆ: ಯೆಲ್ಲೋ ಅಲರ್ಟ್ ಘೋಷಣೆ