ಬೆಂಗಳೂರು: ಮೇಕೆದಾಟು ಯೋಜನೆ ವಿಚಾರದಲ್ಲಿ ಕರ್ನಾಟಕ, ತಮಿಳುನಾಡು ನಡುವಿನ ತಗಾದೆ ನೂರಾರು ವರ್ಷದಿಂದ ನಡೆಯುತ್ತಲೇ ಇದೆ. ಇದನ್ನು ಸರ್ಕಾರ ಬಗೆಹರಿಸಿದರೆ ನಾವು ಅವರ ಬೆನ್ನಿಗೆ ನಿಲ್ಲುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ತಿಳಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಎದ್ದು ಸುಲಭವಾಗಿ ಎರಡು ರಾಜ್ಯಗಳ ಈ ಸಮಸ್ಯೆಯನ್ನು ಪರಿಹರಿಸಬಹುದಾಗಿದೆ. ಯೋಜನೆಗೆ ನಾಳೆಯೇ ಭೂಮಿ ಪೂಜೆ ಮಾಡಲಿ. ರಾಜಕೀಯ ಭಿನ್ನಾಭಿಪ್ರಾಯ ಮರೆತು ಸರ್ಕಾರದ ಜತೆಗೆ ನಾವೆಲ್ಲರೂ ನಿಲ್ಲುತ್ತೇವೆ ಎಂದರು.
ತಮಿಳುನಾಡಿನಲ್ಲಿ ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ ಮೇಕೆದಾಟು ಯೋಜನೆಯನ್ನು ವಿರೋಧಿಸುವುದು ರೂಢಿಯಾಗಿದೆ. ಕರ್ನಾಟಕದ ವಿರುದ್ಧ ಹೋರಾಡುವುದೇ ಅವರ ಅಜೆಂಡಾ ಆಗಿದೆ. ಮೇಕೆದಾಟು ಯೋಜನೆ ಮಾಡಲು ಯಡಿಯೂರಪ್ಪನವರಿಗೆ ರಾಜಕೀಯ ಇಚ್ಛಾಶಕ್ತಿ ಬೇಕು. ಈಗ ಕೇಂದ್ರ ಪರಿಸರ ಮಂಡಳಿಯಿಂದ ಅನುಮತಿ ಸಿಕ್ಕಿದೆ ಎಂಬ ಮಾಹಿತಿ ಇದೆ.
ನಮ್ಮ ದುಡ್ಡು, ನಮ್ಮ ಜಾಗ, ನಮ್ಮ ನೀರು. ತಮಿಳುನಾಡು ಪಾಲಿನ ನೀರಿಗೆ ನಮ್ಮ ಯಾವುದೇ ತಕರಾರು ಇಲ್ಲ. ಅವರ ಪಾಲು ಅವರಿಗೆ ಸಿಗಲಿದೆ. ಮೇಕೆದಾಟು ಯೋಜನೆ ನನ್ನ ಕ್ಷೇತ್ರದಲ್ಲೇ ಬರಲಿದ್ದು, ಇದು ಕೇವಲ ಬೆಂಗಳೂರಿನ ಜನರಿಗೆ ಕುಡಿಯುವ ನೀರು ಪೂರೈಕೆಗೆ ಹಾಗೂ ವಿದ್ಯುತ್ ಉತ್ಪಾದನೆಗೆ ಮಾತ್ರ ಬಳಕೆ ಆಗುತ್ತದೆ. ನನ್ನ ಕ್ಷೇತ್ರದ ಹತ್ತು ಎಕರೆಗೂ ಈ ನೀರು ಬಳಸಿಕೊಳ್ಳುವುದಿಲ್ಲ ಎಂದು ಹೇಳಿದರು.
ಸರ್ವಪಕ್ಷ ನಿಯೋಗ ಯಾಕೆ ಕೊಂಡೊಯ್ಯಬೇಕು?: ಈ ಯೋಜನೆಗೆ ಸುಮಾರು 500 ರಿಂದ 1000 ಎಕರೆಯಷ್ಟು ರೆವಿನ್ಯೂ ಜಾಗ ಹೋಗಬಹುದು. ಯಾವ ಪ್ರದೇಶವೂ ಮುಳುಗಡೆಯಾಗುವ ಭೀತಿ ಇಲ್ಲ. ಹೀಗಾಗಿ ಇದು ಅತ್ಯಂತ ಅಗ್ಗದ ಹಾಗೂ ಉಪಯುಕ್ತ ಯೋಜನೆ. ತಮಿಳುನಾಡಿನವರು ರಾಜಕಾರಣ ಮಾಡುತ್ತಿದ್ದಾರೆ. ಡಿಎಂಕೆ ಆಗಲಿ, ಅಣ್ಣಾಡಿಎಂಕೆ ಆಗಲಿ, ಅವರ ರಾಜಕೀಯ ಅಜೆಂಡಾ ಒಂದೇ. ಆ ಬಗ್ಗೆ ನಮ್ಮ ತಕರಾರಿಲ್ಲ. ನಮ್ಮ ರಾಜ್ಯ ಸರ್ವಪಕ್ಷ ನಿಯೋಗ ಯಾಕೆ ಕೊಂಡೊಯ್ಯಬೇಕು? ಎಂದು ಕೇಳಿದರು.
ನಿಮ್ಮ ಜತೆ ನಾವು ನಿಲ್ಲುತ್ತೇವೆ: ರಾಜ್ಯ ಸರ್ಕಾರ ಕೋವಿಡ್ ವಿಚಾರದಿಂದ ಹಿಡಿದು ಜಿಎಸ್ಟಿವರೆಗೂ ಯಾವ ವಿಚಾರದಲ್ಲೂ ಸರ್ವಪಕ್ಷ ನಿಯೋಗ ಕರೆದೊಯ್ದಿಲ್ಲ. ಸರ್ಕಾರ ವಿರೋಧ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಅವರಿಗೆ ಏನು ಬೇಕೋ ಅದನ್ನು ಮಾಡಿಕೊಂಡಿದ್ದಾರೆ. ಈಗ ಸರ್ವಪಕ್ಷ ನಿಯೋಗ ಏಕೆ ಬೇಕು? ನೀವು ಯೋಜನೆ ಆರಂಭಿಸಿ, ನಿಮ್ಮ ಜತೆ ನಾವು ನಿಲ್ಲುತ್ತೇವೆ ಎಂದು ಸರ್ಕಾರಕ್ಕೆ ಹೇಳುತ್ತಿದ್ದೇವೆ.
ಎರಡೂ ಇಂಜಿನ್ಗಳು ಫೇಲ್ ಆಗಿವೆ: ಮುಖ್ಯಮಂತ್ರಿಗಳು ತಮಿಳುನಾಡಿಗೆ ಪತ್ರ ಬರೆದಿದ್ದೇ ತಪ್ಪು. ಅದರ ಅಗತ್ಯ ಏನಿತ್ತು? ನಾವು ಸರ್ಕಾರದ ಪರವಾಗಿ ಪತ್ರ ಬರೆದಾಗ ಅವರು ಏನು ಮಾಡಿದ್ದರು? ದೆಹಲಿಯಲ್ಲಿ ನಿಮ್ಮದೇ ಸರ್ಕಾರವಿದೆ, ನಿಮ್ಮದೇ ಅಧಿಕಾರವಿದೆ, ಅದನ್ನು ಬಳಸಿಕೊಂಡು ಯೋಜನೆ ಮಾಡಿ. ನಮ್ಮ ನಡುವೆ ರಾಜಕೀಯವಾಗಿ ಎಷ್ಟೇ ಭಿನ್ನಾಭಿಪ್ರಾಯವಿದ್ದರೂ ಈ ವಿಚಾರದಲ್ಲಿ ಸರ್ಕಾರಕ್ಕೆ ಎಲ್ಲ ರೀತಿಯ ಸಹಕಾರ ನೀಡುತ್ತೇವೆ. ಇವರ ನಡಾವಳಿ ನೋಡಿದರೆ ಬಿಜೆಪಿ ಡಬಲ್ ಇಂಜಿನ್ ಸರ್ಕಾರದ ಎರಡೂ ಇಂಜಿನ್ ಗಳು ಫೇಲ್ ಆಗಿವೆ. ಈ ಇಂಜಿನ್ ಓಡಲು ಪೆಟ್ರೋಲ್, ಡೀಸೆಲ್ ಇಲ್ಲವಾಗಿದೆ ಎಂದರು.
224 ಕ್ಷೇತ್ರಗಳಲ್ಲೂ ಗೆಲ್ಲುವ ಗುರಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲೂ ಪಕ್ಷವನ್ನು ಗೆಲ್ಲಿಸಬೇಕು. ಅದೇ ನಮ್ಮ ಗುರಿ. ಮುಂದಿನ ಚುನಾವಣೆಯಲ್ಲಿ 130 ಕ್ಷೇತ್ರ ಗೆಲ್ಲುವುದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಗುರಿ, ನಿಮ್ಮ ಗುರಿ ಏನು ಎಂದು ಮಾಧ್ಯಮದವರು ನನಗೆ ಪ್ರಶ್ನೆ ಮಾಡಿದರು.
ನಾನು ಅದಕ್ಕೆ ರಾಜ್ಯದ 224 ಕ್ಷೇತ್ರಗಳೂ ನಮ್ಮ ಗುರಿ ಎಂದು ಹೇಳಿದೆ. ನನ್ನ ಕ್ಷೇತ್ರದಲ್ಲಿ ಯಾರೋ ಬಿಜೆಪಿ ನಾಯಕರು ನಮ್ಮ ವಿರುದ್ಧ ಗೆಲ್ಲಲು ಪ್ರಯತ್ನಿಸಿದರೆ ತಪ್ಪಿಲ್ಲ. ದಳದವರು ಪ್ರಯತ್ನಿಸಿದರೆ ತಪ್ಪಿಲ್ಲ. ಹಾಗಂತ ನಾವು ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಉಪ ಮುಖ್ಯಮಮಂತ್ರಿಗಳ ಕ್ಷೇತ್ರಗಳಲ್ಲಿ ನಮ್ಮ ಕಾರ್ಯಕರ್ತರನ್ನು ಬಿಟ್ಟುಕೊಡಲು ಸಾಧ್ಯವೇ? ಅಲ್ಲಿ ನಾವ್ಯಾಕೆ ಗೆಲ್ಲಬಾರದು? ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು. ಹೀಗಾಗಿ 224 ಕ್ಷೇತ್ರಗಳಲ್ಲಿ ನಮ್ಮ ಕಾರ್ಯಕರ್ತರಿಗೆ ಶಕ್ತಿ ಕೊಡುವ ಕೆಲಸ ಮಾಡುತ್ತೇವೆ. ಇದು ನಮ್ಮ ಗುರಿ ಎಂದು ವಿವರಿಸಿದರು.
ಇದನ್ನೂ ಓದಿ: ನಾ ಸಿದ್ದರಾಮಯ್ಯ ಜತೆಗಿದ್ದವನು, ಎಷ್ಟು ಹೊತ್ತಿಗೆ ಏನ್ ಮಾಡ್ತಿದ್ರೂ, ಎಲ್ಲಾ ಗೊತ್ತಿದೆ : ಸಚಿವ ಭೈರತಿ ಬಸವರಾಜ್