ಬೆಂಗಳೂರು: ನಗರದಲ್ಲಿ ದಿನೇ ದಿನೆ ಬಿಸಿಲಿನ ಝಳ ಏರುತ್ತಿದ್ದು, ಇನ್ನೆರಡು ದಿನಗಳಲ್ಲಿ ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಂಟಿಗ್ರೇಡ್ಗೆ ಏರಿಕೆಯಾಗುವ ಸಾಧ್ಯತೆ ಇದೆ. ಇನ್ನು ಕರಾವಳಿ ಹಾಗೂ ದ.ಒಳನಾಡು ಜಿಲ್ಲೆಗಳ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ವಿಭಾಗದ ನಿರ್ದೇಶಕ ಸಿ.ಎಸ್ ಪಾಟೀಲ್ ತಿಳಿಸಿದರು.
ಇಂದು ಕರಾವಳಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆದಿದೆ. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 41.6, ರಾಯಚೂರಿನಲ್ಲಿ 39.8, ಬೀದರ್ 38.6, ಗದಗ 37.2, ಕೊಪ್ಪಳ 37.5 , ಬೆಳಗಾವಿ 36.7, ಧಾರವಾಡ 36.4 , ದಾವಣಗೆರೆಯಲ್ಲಿ 36 ಡಿಗ್ರಿ ಸೆಂಟಿಗ್ರೇಡ್ ದಾಖಲಾಗಿದೆ. ಹಾಗೂ ಬೆಂಗಳೂರಿನಲ್ಲಿ ಉಷ್ಣಾಂಶ 34.8 ಡಿಗ್ರಿ ಸೆಂಟಿಗ್ರೇಡ್ ದಾಖಲಾಗಿದೆ.
ಇದನ್ನು ಓದಿ: ಬೆಂಗಳೂರಿನಲ್ಲಿ ಇಂದು 1,995 ಮಂದಿಗೆ ಕೋವಿಡ್ ಪಾಸಿಟಿವ್
ಉಡುಪಿ ಹಾಗೂ ದ.ಕನ್ನಡ ಜಿಲ್ಲೆಗಳ ಕೆಲವು ಕಡೆ ಮಾರ್ಚ್ 30, 31 ರಂದು ಕೆಲವು ಕಡೆ ಮಳೆಯಾಗುವ ಸಾಧ್ಯತೆ ಇದ್ದು, ಎಪ್ರಿಲ್ 1 ರಿಂದ 3 ರವರೆಗೆ ಒಣಹವೆ ಇರಲಿದೆ. ಮೈಸೂರು, ಚಾಮರಾಜನಗರ, ಕೊಡಗು, ಹಾಗೂ ಚಿಕ್ಕಮಂಗಳೂರು ಜಿಲ್ಲೆಯ ಕೆಲವು ಕಡೆ ಮಾ.30, 31 ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಗರಿಷ್ಠ ಉಷ್ಣಾಂಶ 35 ಡಿಗ್ರಿ ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಂಟಿಗ್ರೇಡ್ ಇರುವ ಸಾಧ್ಯತೆ ಇದೆ ಎಂದು ತಿಳಿಸಿದರು.