ಬೆಂಗಳೂರು: ಕೋವಿಡ್-19 ನಿಯಂತ್ರಣಕ್ಕೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಕುರಿತು ವರದಿ ನೀಡುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ಪ್ರತಿ ವಾರ ಒಂದು ದಿನ ಆಯಾ ಜಿಲ್ಲೆಗಳಿಗೆ ಉಸ್ತುವಾರಿ ಕಾರ್ಯದರ್ಶಿಗಳು ಪ್ರವಾಸ ಮಾಡಿ, ಕೋವಿಡ್-19ನ ಹರಡುವಿಕೆ ತಡೆಗಟ್ಟಲು ಜಿಲ್ಲಾಡಳಿತ ವಹಿಸಿದ ಮತ್ತು ವಹಿಸಬೇಕಾದ ಕ್ರಮಗಳನ್ನು ಪರಿಶೀಲನೆ ಮಾಡುವಂತೆ ಸಿಎಂ ಸೂಚಿಸಿದ್ದಾರೆ.
ಕಳೆದ ವಾರ ಎಲ್ಲಾ ಜಿಲ್ಲೆಗಳಿಗೆ ಆಯಾ ಜಿಲ್ಲೆಗಳ ಉಸ್ತುವಾರಿ ಕಾರ್ಯದರ್ಶಿಗಳು ಪ್ರವಾಸ ಮಾಡಿದ್ದರು. ಆದರೆ ವರದಿಯನ್ನು ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಆಡಳಿತ ಸುಧಾರಣೆ)ಗೆ ನೀಡಿರಲಿಲ್ಲ. ಈ ವಾರವೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ವಾರದೊಳಗಾಗಿ ಸಂಬಂಧಿಸಿದ ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳಲಿದ್ದಾರೆ. ಸರ್ಕಾರದ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ(ಆಡಳಿತ ಸುಧಾರಣೆ)ಗೆ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ.