ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನ ರಾಜ್ಯ ಹವಾಮಾನ ಇಲಾಖೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಕ್ಟೋಬರ್ 12 ರಿಂದ 14ರವರೆಗೆ ಭಾರೀ ಮಳೆಯಾಗಲಿದೆ. ಹೀಗಾಗಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಉತ್ತರ ಒಳನಾಡಿನಲ್ಲಿ 12-14 ರವರೆಗೆ ವ್ಯಾಪಕ ಮಳೆಯಾಗಲಿದೆ. ಇತ್ತ ಬೀದರ್, ಕಲಬುರಗಿ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಹಾವೇರಿ, ಧಾರವಾಡ, ವಿಜಯಪುರ ಭಾಗದಲ್ಲೂ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನಲ್ಲಿ ಬಹುತೇಕ ಎಲ್ಲ ಭಾಗದಲ್ಲೂ ಮಳೆಯಾಗಲಿದ್ದು, ಅಕ್ಟೋಬರ್ 15 ರ ನಂತರ ತಗ್ಗಲಿದೆ. ಹಾಸನ, ಬಳ್ಳಾರಿ, ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ ಮಳೆಯಾಗಲಿದ್ದು, ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕಳೆದ ಒಂದು ವಾರದಿಂದ ಬೆಂಗಳೂರಿನಲ್ಲೂ ಸಾಧಾರಣ ಮಳೆಯಾಗುತ್ತಿದ್ದು, ಮುಂದಿನ ವಾರವೂ ಕೆಲವು ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ವಿಭಾಗದ ನಿರ್ದೇಶಕ ಸಿ. ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.