ಬೆಂಗಳೂರು : ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದ್ದು, ಕರ್ನಾಟಕದ ಒಳನಾಡಿನಲ್ಲಿ ಕೆಲವೆಡೆ ಮಾತ್ರ ಮಳೆಯಾಗಿದೆ. ಮುಖ್ಯವಾಗಿ ಭಟ್ಕಳದಲ್ಲಿ 8 ಸೆಂ.ಮೀ, ಪಣಂಬೂರು, ದಕ್ಷಿಣ ಕನ್ನಡದ ಉಪ್ಪಿನಂಗಡಿ, ಚಿಕ್ಕಮಗಳೂರಿನ ಶೃಂಗೇರಿಯಲ್ಲಿ 6 ಸೆಂ.ಮೀ, ಮಳೆಯಾಗಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕರಾದ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ಪೂರ್ವ ಅರಬ್ಬೀ ಸಮುದ್ರದ ರಾಜ್ಯದ ಕರಾವಳಿಯಲ್ಲಿ ಕಡಿಮೆ ಒತ್ತಡವಿರುವ ವಿಸ್ತರಿಸಿದ ಪ್ರದೇಶ ಇದೆ. ಈ ಪ್ರಭಾವದಿಂದ ಕರಾವಳಿ ಜಿಲ್ಲೆಗಳಲ್ಲಿ ಜೂನ್ 23ರವರೆಗೆ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಜೂನ್ 24 ಮತ್ತು 25ರಂದು ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದ್ದು, ಸದ್ಯಕ್ಕೆ ಬಹುತೇಕ ಎಲ್ಲಾ ಕಡೆ ಮಲೆಯಾಗುವ ಸಾಧ್ಯತೆ ಇದೆ ಎಂದಿದ್ದಾರೆ.
ಉತ್ತರಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಎಲ್ಲೊ ಅಲರ್ಟ್ ಕೊಡಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಜೂನ್ 23ರವರೆಗೆ ಬಹುತೇಕ ಎಲ್ಲಾ ಸ್ಥಳಗಳಲ್ಲಿ ಮಳೆಯಾಗುವ ನಿರೀಕ್ಷೆಯಿದ್ದು, ಜೂನ್ 24 ಮತ್ತು 25ರಂದು ಕೆಲವೆಡೆ ಮಾತ್ರ ಮಳೆಯಾಗಲಿದೆ ಎಂದು ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ.
ಉತ್ತರ ಒಳನಾಡಿನಲ್ಲಿ ಜೂನ್ 25ರವರೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯಾದ್ಯಂತ ಜೂನ್ 25ರ ನಂತರ ಮಳೆಯ ಪ್ರಮಾಣ ಗಣನೀಯವಾಗಿ ಕುಂಠಿತವಾಗುವ ಹೆಚ್ಚಿನ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.