ಬೆಂಗಳೂರು: ಕೇಂದ್ರ ಬಿಜೆಪಿ ಸರ್ಕಾರ ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಹಾಗು ಜನಸಾಮಾನ್ಯರ ಅಗತ್ಯ ಪದಾರ್ಥಗಳ ಬೆಲೆಗಳನ್ನು ದುಬಾರಿ ಮಾಡಿರುವುದನ್ನು ಖಂಡಿಸಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.
ಇಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರು ರೈಲು ನಿಲ್ದಾಣದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯಿಂದ ಮೌರ್ಯ ವೃತ್ತದ ಗಾಂಧಿ ಪ್ರತಿಮೆಯವರೆಗೆ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ. ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ. ಪುಷ್ಪಾ ಅಮರನಾಥ್ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಲಿದೆ.
ಇದನ್ನೂ ಓದಿ: ಮೋದಿ ಮತ್ತು ಆಝಾದ್ : ರಾಜ್ಯ ಸಭೆ ವಿದಾಯ ಭಾಷಣ ರಾಜಕೀಯದ ಹಿನ್ನೆಲೆಯೇನು..?
ಈ ಪ್ರತಿಭಟನಾ ಮೆರವಣಿಗೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರುಗಳು, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್ ಭಾಗವಹಿಸಲಿದ್ದಾರೆ.
ಇವರ ಜೊತೆಗೆ ಹಾಲಿ ಹಾಗೂ ಮಾಜಿ ಸಂಸದರು, ಮಾಜಿ ಸಚಿವರುಗಳು, ಹಾಲಿ ಹಾಗು ಮಾಜಿ ಶಾಸಕರುಗಳು, ಮಾಜಿ ಬಿಬಿಎಂಪಿ ಸದಸ್ಯರುಗಳು, ಕೆಪಿಸಿಸಿ/ಡಿಸಿಸಿ ಪದಾಧಿಕಾರಿಗಳು, ಬ್ಲಾಕ್ ಅಧ್ಯಕ್ಷರು, ಮಹಿಳಾ ಕಾಂಗ್ರೆಸ್‌ನ ಜಿಲ್ಲಾಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಮಹಿಳಾ ಕಾಂಗ್ರೆಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.