ಬೆಂಗಳೂರು: ಸಂಘಟನಾತ್ಮಕವಾಗಿ ಮತ್ತಷ್ಟು ಬಲಗೊಳ್ಳದಿದ್ದರೆ ಮುಂಬರಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೇರಲು ಕಷ್ಟವಾಗಲಿದೆ ಎಂದು ಸಿದ್ದರಾಮೋತ್ಸವಕ್ಕೆ ಸಿಕ್ಕ ಜನಬೆಂಬಲ ಉಲ್ಲೇಖಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.
ಅಮಿತ್ ಶಾ ಯಡಿಯೂರಪ್ಪ ಭೇಟಿ: ನಗರಕ್ಕೆ ಆಗಮಿಸಿರುವ ಅಮಿತ್ ಶಾ ಅವರನ್ನು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭೇಟಿ ಮಾಡಿ ಅನೌಪಚಾರಿಕವಾಗಿ ಮಾತುಕತೆ ನಡೆಸಿದರು. ರೇಸ್ ಕೋರ್ಸ್ ರಸ್ತೆಯಲ್ಲಿರುವ ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ಅಮಿತ್ ಶಾ ಅವರನ್ನು ಭೇಟಿಯಾದ ಅವರು ರಾಜ್ಯ ರಾಜಕೀಯದಲ್ಲಿ ಇತ್ತೀಚೆಗೆ ನಡೆದಿರುವ ಬೆಳವಣಿಗೆಗಳ ಕುರಿತು ಮಾತುಕತೆ ನಡೆಸಿದರು. ಅಲ್ಪಾವಧಿಯ ಈ ಭೇಟಿಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ 75ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ದಾವಣಗೆರೆಯಲ್ಲಿ ನಡೆದ ಬೃಹತ್ ಸಮಾವೇಶದ ಕುರಿತು ಪ್ರಸ್ತಾಪಿಸಿದರು.
ಕಾಂಗ್ರೆಸ್ ಒಗ್ಗಟ್ಟು ಪ್ರದರ್ಶನ: ಪ್ರತಿಪಕ್ಷದಲ್ಲಿರುವ ಕಾಂಗ್ರೆಸ್ ನಾಯಕರು ತಮ್ಮೊಳಗಿನ ಆಂತರಿಕ ಬಿಕ್ಕಟ್ಟು ಬದಿಗೊತ್ತಿ ಒಗ್ಗಟ್ಟು ಪ್ರದರ್ಶನ ಮಾಡಿದ್ದಾರೆ. ನಿರೀಕ್ಷೆಗೂ ಮೀರಿ ಜನರ ಬೆಂಬಲ ಸಮಾವೇಶದಲ್ಲಿ ಕಂಡುಬಂದಿದೆ. ಇದು ಬಿಜೆಪಿಗೆ ಎಚ್ಚರಿಕೆಯ ಗಂಟೆಯಾಗಬೇಕು. ನಾವು ಇದನ್ನು ಎದುರಿಸಲು ಕಾರ್ಯತಂತ್ರ ರೂಪಿಸದೇ ಇದ್ದಲ್ಲಿ ಮುಂದಿನ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಮರಳುವುದು ಕಠಿಣವಾಗಲಿದೆ ಎನ್ನುವ ಅಭಿಪ್ರಾಯವನ್ನು ಅಮಿತ್ ಶಾ ಮುಂದೆ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಮೋದಿ ದೂರದೃಷ್ಟಿ ನಾಯಕ, ಅಮಿತ್ ಶಾ ದಕ್ಷ ನಾಯಕ: ಸಿಎಂ ಬೊಮ್ಮಾಯಿ ಬಣ್ಣನೆ
ಚುನಾವಣೆ ಹತ್ತಿರ ಬರುತ್ತಿದೆ. ನಾವು ರಾಜ್ಯ ಪ್ರವಾಸ ಮಾಡಿ ಪಕ್ಷ ಸಂಘಟನೆಗೆ ಈಗಿನಿಂದಲೇ ಮುಂದಾಗಬೇಕು. ಪಕ್ಷವನ್ನು ಸಜ್ಜುಗೊಳಿಸಬೇಕು. ಅಜಾದಿ ಕಾ ಅಮೃತ್ ಮಹೋತ್ಸವ ಆದ ನಂತರ ರಾಜ್ಯ ಪ್ರವಾಸಕ್ಕೆ ಕಾರ್ಯಕ್ರಮಗಳನ್ನು ರೂಪಿಸುವುದು ಅಗತ್ಯವಿದೆ ಎನ್ನುವ ವಿಷಯವನ್ನು ಅಮಿತ್ ಶಾ ಗಮನಕ್ಕೆ ಯಡಿಯೂರಪ್ಪ ಅವರು ತಂದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.