ಬೆಂಗಳೂರು: ಪೂರ್ವ ಅರಬ್ಬಿ ಸಮುದ್ರದಲ್ಲಿ ಕರ್ನಾಟಕ-ಕೇರಳ ಕರಾವಳಿ ಭಾಗಗಳಲ್ಲಿ ದಟ್ಟ ಮೋಡ ಇರುವುದರಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂನ್ 2 ರಿಂದ 6 ರವರೆಗೆ ವ್ಯಾಪಕ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉ. ಕನ್ನಡ ಜಿಲ್ಲೆಗಳಲ್ಲಿ ಜೂನ್ 4 ರವರೆಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಮುನ್ಸೂಚನೆ ವಿಭಾಗದ ನಿರ್ದೇಶಕ ಸಿ. ಎಸ್. ಪಾಟೀಲ ತಿಳಿಸಿದ್ದಾರೆ.
ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಜೂನ್ 2 ರಿಂದ 5 ರವರೆಗೆ ಎಲ್ಲಾ ಕಡೆ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಬಾಗಲಕೋಟೆ, ಬಿಜಾಪುರ, ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದ್ದು, ಜೂನ್ 3 ರಂದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದರು.
ಶಿವಮೊಗ್ಗ, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಜೂನ್ ಎರಡರಿಂದ ನಾಲ್ಕರವರೆಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ ಎಂದು ತಿಳಿಸಿದರು.
ಇಂದು ಕರಾವಳಿ ಜಿಲ್ಲೆಗಳಲ್ಲಿ ಬಹುತೇಕ ಎಲ್ಲಾ ಸ್ಥಳಗಳಲ್ಲಿ ಮಳೆಯಾಗಿದ್ದು, ಕರ್ನಾಟಕದ ಒಳನಾಡಿನಲ್ಲಿ ಕೆಲವು ಕಡೆ ಮಳೆಯಾಗಿದೆ. ಪಣಂಬೂರಿನಲ್ಲಿ 4 ಸೆಂ.ಮೀ, ಬಾಗಲಕೋಟೆ 4 ಸೆಂ.ಮೀ, ಬೀದರ್ ನಲ್ಲಿ 2 ಸೆಂ.ಮೀ ಮಳೆಯಾಗಿದೆ ಎಂದು ಹೇಳಿದರು.
ಓದಿ: ಲಾಕ್ಡೌನ್ ವಿಸ್ತರಣೆ ಸುಳಿವು ನೀಡಿದ ಸಿಎಂ.. ನಾಳೆಯಿಂದ ರಫ್ತು ಉದ್ಯಮಕ್ಕೆ ಅವಕಾಶ