ಬೆಂಗಳೂರು: ಕಳೆದ ವಾರ ಭಾರಿ ಮಳೆಯಾಗಿದ್ದ ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ಆಗಸ್ಟ್ 13 ಹಾಗೂ 16 ರಂದು ಕೆಲವು ಕಡೆ ಮಾತ್ರ ಭಾರಿ ಮಳೆಯಾಗಲಿದ್ದು, ಎಲ್ಲೋ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಣೆ ಮಾಡಿದೆ.
ಈ ಬಗ್ಗೆ ಮಾತನಾಡಿದ ಹವಾಮಾನ ಇಲಾಖೆಯ ತಜ್ಞರಾದ ಸಿ.ಎಸ್ ಪಾಟೀಲ್, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಕಳೆದ ಇಪ್ಪತ್ನಾಲ್ಕು ಗಂಟೆಯಲ್ಲಿ ವ್ಯಾಪಕ ಮಳೆಯಾಗಿದ್ದು, ಉತ್ತರ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗಿದೆ ಎಂದರು.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12 ರಿಂದ 16 ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಆಗಸ್ಟ್ 12, 13 ಹಾಗೂ 16 ರಂದು ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಒಳನಾಡಿನಲ್ಲಿ ಆಗಸ್ಟ್ 12, 13 ಹಾಗೂ 16 ರಂದು ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಮಳೆಯಾಗಬಹುದು. ಆದರೆ, ಆಗಸ್ಟ್ 14 -15 ರಂದು ಉತ್ತರ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗಬಹುದು. ಬೀದರ್ ಹಾಗೂ ಕಲಬುರ್ಗಿಯಲ್ಲಿ ಇಂದು ಕೆಲವು ಕಡೆ ಭಾರಿ ಮಳೆಯಾಗುವುದರಿಂದ ಎಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದರು.
ದಕ್ಷಿಣ ಒಳನಾಡಿನಲ್ಲಿ ಇಂದು ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಮಳೆಯಾಗಬಹುದು. ಆಗಸ್ಟ್ 13, 14, 15, 16 ರಂದು ಕೆಲವು ಕಡೆ ಮಾತ್ರ ಮಳೆ ಮಳೆಯಾಗಬಹುದು. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಇಂದು ಹಾಗೂ 16 ರಂದು ಕೆಲವು ಕಡೆ ಮಾತ್ರ ಭಾರಿ ಮಳೆಯಾಗಲಿರುವುದರಿಂದ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಕೆಲವು ಕಡೆ ಮಾತ್ರ ಮಳೆಯಾಗಲಿದೆ ಎಂದು ಹವಾಮಾನ ವರದಿ ತಿಳಿಸಿದೆ ಎಂದರು.