ಬೆಂಗಳೂರು : ಸೆಪ್ಟೆಂಬರ್ 18 ಮತ್ತು 19 ರಂದು ಕರಾವಳಿಯ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ. ಒಳನಾಡಿನಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30 ರಿಂದ 40 ಕಿ.ಮೀ ಇರಲಿದೆ. ಸೋಮವಾರ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ ಎಂದು ಹೇಳಿದೆ.
ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿ.ಮೀ ಇಂದ 55 ಕಿ.ಮೀ ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ. ಆದ್ದರಿಂದ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ: ಬೆಂಗಳೂರು ನಗರದಲ್ಲಿ ಮುಂದಿನ 2 ದಿನ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಸಂಜೆ ಹಾಗೂ ರಾತ್ರಿಯ ವೇಳೆಗೆ ಹಗುರ/ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗಲಿದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆ : ಶನಿವಾರ ರಾಜ್ಯದ ಕೆಲವೆಡೆ ಭಾರಿ ಮಳೆಯಾಗಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲೂ ಮಧ್ಯಾಹ್ನ ವರುಣ ಆರ್ಭಟ ಜೋರಾಗಿತ್ತು. ಶುಕ್ರವಾರ ಸಂಜೆ ಸಾಧಾರಣ ಮಳೆಯಾಗಿತ್ತು. ಶನಿವಾರ ಮಧ್ಯಾಹ್ನ ಸುಮಾರಿಗೆ ಮೂರು ಗಂಟೆಗಳ ಕಾಲ ನಿರಂತರ ಮಳೆಯಾಗಿತ್ತು. ಇಲ್ಲಿನ ರಸ್ತೆಗಳಲ್ಲಿ ನೀರು ಹರಿದಿದ್ದರಿಂದ ವಾಹನ ಸವಾರರು ಪರದಾಡುವಂತಾಗಿತ್ತು.
ಜಿಲ್ಲೆಯ ವಿವಿದೆಡೆ ಭಾರಿ ಮಳೆ : ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಾಳೂರು, ಬಣಕಲ್, ಜಾವಳಿ ಸುತ್ತಮುತ್ತ ಭಾರಿ ಮಳೆ ಸುರಿದಿದೆ. ಅಕಾಲಿಕ ಮಳೆಯಿಂದಾಗಿ ಅಡಿಕೆ, ಕಾಫಿ, ಮೆಣಸು ಬೆಳೆಗಾರರು ಸಂಕಷ್ಟಕ್ಕೊಳಗಾಗಿದ್ದರು.
ರಾಜ್ಯದಲ್ಲಿ ಒಂದೆಡೆ ಬರದಿಂದಾಗಿ ರೈತರು ಬೆಳೆದ ಬೆಳೆಗಳು ಸಂಪೂರ್ಣ ಹಾಳಾಗಿವೆ. ಮತ್ತೊಂದೆಡೆ ಘಟ್ಟ ಪ್ರದೇಶದ ತಪ್ಪಲಿನಲ್ಲಿ ಅಕಾಲಿಕ ಮಳೆಯಿಂದ ಕಾಫಿ ಹಣ್ಣಾಗಿದೆ. ಇನ್ನು ಕೆಲ ಭಾಗದಲ್ಲಿ ಕಾಫಿ ಕೊಯ್ಲಿಗೆ ಬಂದಿದ್ದು, ಒಂದೆರಡು ತಿಂಗಳಲ್ಲಿ ಕಾಫಿ ಹಣ್ಣನ್ನು ಕೊಯ್ಲು ಮಾಡುತ್ತಿದ್ದರು. ಆದರೆ ಮಳೆ ಗಾಳಿಯಿಂದಾಗಿ ಕಾಫಿ ಉದುರುವ ಆತಂಕ ಬೆಳೆಗಾರರಿಗೆ ಎದುರಾಗಿದೆ. ಧಾರಾಕಾರ ಮಳೆಯಿಂದಾಗಿ ಗ್ರಾಮೀಣ ಭಾಗದಲ್ಲಿ ವಿದ್ಯುತ್ ಕಡಿತ ಉಂಟಾಗಿ ಜನರು ಪರದಾಡಿದರು.
ರಾಜ್ಯದಲ್ಲಿ ನೈರುತ್ಯ ಮುಂಗಾರು ದುರ್ಬಲ : ರಾಜ್ಯದ ವಿವಿಧೆಡೆ ನೈರುತ್ಯ ಮುಂಗಾರು ದುರ್ಬಲವಾಗಿದ್ದು, ಕೆಲವೆಡೆ ಮಾತ್ರ ಮಳೆಯಾಗಿತ್ತು. ಕಳೆದ ನಾಲ್ಕು ದಿನಗಳ ಹಿಂದೆ ಕರಾವಳಿಯಲ್ಲಿ ವ್ಯಾಪಕವಾಗಿ ಮಳೆಯಾಗಿತ್ತು. ಮತ್ತು ವಿವಿಧೆಡೆ ಸಾಧಾರಣ ಮಳೆಯಾಗಿತ್ತು. ಮುಖ್ಯವಾಗಿ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ 3 ಸೆಂ.ಮೀ ಮಳೆಯಾಗಿದೆ.
ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆ : ಜನಜೀವನ ಅಸ್ತವ್ಯಸ್ತ