ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿ ಗಾಳಿಯ ತೀವ್ರತೆ ಹಾಗೂ ಪೂರ್ವ ವಲಯದಲ್ಲಿ ಮೋಡಗಳ ಚಲನೆ ಹೆಚ್ಚಾಗಿರುವುದರಿಂದ ನಾಳೆ ಮತ್ತು ನಾಡಿದ್ದು ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳು ಸೇರಿ ಒಟ್ಟು 7 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ.
ಜನವರಿ 8 ಮತ್ತು 9 ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ 64.5 ಮಿ.ಮೀ ನಿಂದ 115.5 ಮಿ.ಮೀ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಓದಿ : ಅಕಾಲಿಕ ಮಳೆ: ಅರ್ಧ ದಿನ ವಿದ್ಯುತ್ ಸ್ಥಗಿತ... ಜನರಿಗೆ ಪರದಾಟ
ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ತೀವ್ರತೆ ಹೆಚ್ಚಾಗಿರುವುದರಿಂದ ಈಗಾಗಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಗುರುವಾರ ಕೂಡ ಹಲವೆಡೆ ಭಾರೀ ಮಳೆಯಾಗಿದೆ. ಮುಂದಿನ 48 ಗಂಟೆಗಳಲ್ಲಿ ಕರಾವಳಿ, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮತ್ತು ಉತ್ತರ ಒಳನಾಡಿನ ವಿವಿಧೆಡೆ ತುಂತುರು ಮಳೆಯಾಗುವ ಸಾಧ್ಯತೆ ಇದೆ.