ಬೆಂಗಳೂರು : ಬಿಜೆಪಿ ಮುಖಂಡ ಯೋಗೇಶ್‌ಗೌಡ ಕೊಲೆ ಪ್ರಕರಣದ ಸಂಬಂಧ ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಶಾಸಕ ವಿನಯ ಕುಲಕರ್ಣಿ ವಿರುದ್ಧದ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆಗಳಿಗೆ ತಡೆ ನೀಡಬೇಕೆಂಬ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.
ನನ್ನ ವಿರುದ್ಧ ಹೊರಿಸಲಾಗಿರುವ ದೋಷಾರೋಪಣೆ ಮತ್ತು ಬೆಂಗಳೂರು ಸಿಟಿ ಸಿವಿಲ್ ಕೋರ್ಟ್‌ನ ವಿಶೇಷ ನ್ಯಾಯಾಲಯದಲ್ಲಿ ನಡೆಯಲಿರುವ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ರದ್ದುಗೊಳಿಸಬೇಕು ಎಂದು ಕೋರಿ, ವಿನಯ ಕುಲಕರ್ಣಿ ಸಲ್ಲಿಸಿರುವ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ನ್ಯಾಯಪೀಠ ಮನವಿಯನ್ನು ತಿರಸ್ಕರಿಸಿದೆ.
ವಿಚಾರಣೆ ವೇಳೆ ವಿನಯ ಕುಲಕರ್ಣಿ ಪರ ವಕೀಲ, ವಿಚಾರಣಾ ನ್ಯಾಯಾಲಯ ತನ್ನ ಪ್ರಕ್ರಿಯೆ ಆರಂಭಿಸಲು ಇದೇ 29ರ ದಿನಾಂಕ ನಿಗದಿಗೊಳಿಸಿದೆ. ಇದಕ್ಕೆ ಮಧ್ಯಂತರ ತಡೆ ನೀಡಬೇಕು ಎಂದು ಕೋರಿದರು. ಇದನ್ನು ಸ್ಪಷ್ಟವಾಗಿ ನಿರಾಕರಿಸಿದ ನ್ಯಾಯಪೀಠ, ಪ್ರತಿವಾದಿ ಸಿಬಿಐಗೆ ನೊಟೀಸ್ ಜಾರಿ ಮಾಡಿ ವಿಚಾರಣೆ ಮುಂದೂಡಿತು.
ಸಿಬಿಐ ಪರ ವಕೀಲರು, ಈ ಪ್ರಕರಣದ ವಿಚಾರಣಾ ನ್ಯಾಯಾಲಯದ ವಿಚಾರಣೆಯಲ್ಲಿ ಸಿಬಿಐ ಪರವಾದ ವಿಶೇಷ ಪ್ರಾಸಿಕ್ಯೂಟರ್ ಆಗಿ ಹಾಜರಾಗಲು ಗಂಗಾಧರ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ ಎಂಬ ಈ ಮೊದಲಿನ ಅಧಿಸೂಚನೆಯಲ್ಲಿ ಬದಲಾವಣೆ ಮಾಡಲಾಗಿದೆ. ಪ್ರಸ್ತುತ ನಾನೇ ಈ ಪ್ರಕರಣದಲ್ಲಿ ಮುಂದುವರಿಯುವಂತೆ ನನಗೆ ಬೆಂಗಳೂರು ವಿಭಾಗದ ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ಪ್ರಕರಣದ ಹಿನ್ನೆಲೆ ಏನು ?: ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2016ರ ಜೂನ್ 15ರಂದು ಯೋಗೇಶ್‌ಗೌಡ ಕೊಲೆ ನಡೆದಿತ್ತು. ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಿದ್ದು, ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ. ಪ್ರಕರಣ ವಿಚಾರಣಾ ಹಂತದಲ್ಲಿದೆ. ಪ್ರಕರಣ ಸಂಬಂಧ 2020ರ ನವೆಂಬರ್‌ನಲ್ಲಿ ವಿನಯ ಕುಲಕರ್ಣಿ ಅವರನ್ನು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.
ಇದನ್ನೂ ಓದಿ: ನ್ಯಾಯಮೂರ್ತಿ ವರ್ಗಾವಣೆ ಕುರಿತು ಸಿಜೆಐಗೆ ಪತ್ರ ಬರೆದ ಆರೋಪ: ಮುರುಘಾ ಮಠದ ಸಿಇಒಗೆ ಹೈಕೋರ್ಟ್ ಸಮನ್ಸ್