ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರಾಜೀನಾಮೆಗೆ ಆಗ್ರಹಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದ ರೇಸ್ ಕೋರ್ಸ್ ರಸ್ತೆಯ ಮಹಾತ್ಮಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.
ಸಿಎಂ ವಿರುದ್ಧ ಮತ್ತೆ ಮತ್ತೆ ಡಿನೋಟಿಫಿಕೇಷನ್ ಹಗರಣದ ತನಿಖೆಗೆ ನ್ಯಾಯಾಲಯ ಆದೇಶಿಸುತ್ತಿದ್ದರೂ ರಾಜೀನಾಮೆ ನೀಡದ ಯಡಿಯೂರಪ್ಪ ವರ್ತನೆ ಖಂಡನೀಯ. ಇವರು ಕೂಡಲೇ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿದರು.
ಡಿನೋಟಿಫಿಕೇಷನ್ ಹಗರಣಗಳ ಮೂಲಕ ಜೈಲು ಪಾಲಾಗಿದ್ದ ಯಡಿಯೂರಪ್ಪ ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗಿ ಆಡಳಿತ ನಡೆಸುತ್ತಿರುವುದು, ಭ್ರಷ್ಟಾಚಾರಕ್ಕೆ ಬಿಜೆಪಿ ಪಕ್ಷದ ನಾಯಕರ ಬೆಂಬಲ ಹಾಗೂ ಕೇಂದ್ರ ಸಚಿವರ ಸಹಕಾರ ಇರುವುದು ಬಹಿರಂಗವಾಗಿದೆ.
ಇದನ್ನೂ ಓದಿ: 'ಬಿಎಸ್ವೈ ಸರ್ಕಾರ ಅಧಿಕಾರಕ್ಕೆ ಬಂದಾಗ ಪ್ರವಾಹ, ಬರ, ಕೊರೊನಾ ಎದುರಾದವು'
ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತೇವೆ ಎನ್ನುವ ನರೇಂದ್ರ ಮೋದಿ ಅವರು ಬಿಜೆಪಿ ಸರ್ಕಾರದಲ್ಲೇ ಅತಿ ಹೆಚ್ಚು ಭ್ರಷ್ಟಾಚಾರ ನಡೆದಿರುವುದು ತಿಳಿದಿದ್ದರೂ ಮೌನಕ್ಕೆ ಶರಣಾಗಿದ್ದಾರೆ. ಯಡಿಯೂರಪ್ಪ ಅವರ ಭ್ರಷ್ಟಾಚಾರದ ಹಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪಾಲು ಎಷ್ಟು ಎಂಬುದನ್ನು ತಿಳಿಸಬೇಕು. ಭ್ರಷ್ಟಾಚಾರದ ಹಣ ಪಡೆಯುತ್ತಿಲ್ಲ ಎಂಬುದಾದರೇ ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್ ಯಡಿಯೂರಪ್ಪನವರನ್ನು ಪ್ರಧಾನಿ ನರೇಂದ್ರ ಮೋದಿ ಕೂಡಲೇ ವಜಾಗೊಳಿಸಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದರು.
ಈ ವೇಳೆ ಕಾಂಗ್ರೆಸ್ ಮುಖಂಡ ಎಸ್.ಮನೋಹರ್ ಮಾತನಾಡಿ, ಡಿನೋಟಿಫಿಕೇಷನ್ ಹಗರಣದಲ್ಲಿ ಅತ್ಯಂತ ಅತಿ ಹೆಚ್ಚು ಭ್ರಷ್ಟಾಚಾರ ನಡೆಸಿರುವ ಪಕ್ಷವೆಂದರೆ ಅದು ಭಾರತೀಯ ಜನತಾ ಪಾರ್ಟಿ ಎಂಬುದು ಈಗ ಮತ್ತೊಮ್ಮೆ ಸಾಬೀತಾಗಿದೆ ಎಂದು ವ್ಯಂಗ್ಯವಾಡಿದರು.