ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ನೆರೆಹಾವಳಿಯಲ್ಲಿ ಭಾರಿ ಪ್ರಮಾಣದ ಕಷ್ಟನಷ್ಟ ಸಂಭವಿಸಿದ ಹಿನ್ನೆಲೆಯಲ್ಲಿ 'ರಾಷ್ಟ್ರೀಯ ವಿಪತ್ತು' ಎಂದು ಕೇಂದ್ರ ಸರ್ಕಾರ ಘೋಷಿಸಬೇಕು. ಮೂಗಿಗೆ ತುಪ್ಪ ಸವರುವ ಕೆಲಸ ಬಿಡಬೇಕು ಎಂದು ಕೇಂದ್ರದ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ವಾಗ್ದಾಳಿ ನಡೆಸಿದ್ದಾರೆ.
ನೆರೆ ಸಂತ್ರಸ್ಥರಿಗೆ ಸೂಕ್ತ ಪರಿಹಾರ ಬಿಡುಗಡೆ ಮಾಡುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿಳಂಬ ನೀತಿ ಖಂಡಿಸಿ ರಾಜ್ಯ ಯುವ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿದ್ದ ಪ್ರತಿಭಟನೆ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ನೆರೆಯಿಂದ 10 ಲಕ್ಷ ಹೆಕ್ಟೇರ್ ಭೂಮಿ ಹಾಗೂ 25 ಲಕ್ಷ ಹೆಕ್ಟೇರ್ ಕೃಷಿ ಭೂಮಿ ನಾಶವಾಗಿದೆ. ಭೂಮಿ ಕಳೆದುಕೊಂಡ ನಿರಾಶ್ರಿತರಿಗೆ ತಲಾ 1 ಲಕ್ಷ ರೂ. ಹಾಗೂ ಮನೆ ಕಳೆದುಕೊಂಡವರಿಗೆ 10 ಲಕ್ಷ ರೂ. ಪರಿಹಾರ ಘೋಷಿಸಬೇಕು ಎಂದು ಖಂಡ್ರೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.
ರೇಸ್‌ಕೋರ್ಸ್ ಬಳಿಯಿರುವ ಕಾಂಗ್ರೆಸ್ ಭವನದಿಂದ ವಿಧಾನಸೌಧದವರೆಗೆ ಯುವ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಬಸವನಗೌಡ ಬಾದರ್ಲಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕೇಂದ್ರ ಸರ್ಕಾರ ಚುನಾವಣೆ ಆಯೋಗ, ಇ.ಡಿ, ಆದಾಯ ತೆರಿಗೆ ಇಲಾಖೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಪ್ರತಿಭಟನೆಯಲ್ಲಿ ಆಕ್ರೋಶ ವ್ಯಕ್ತವಾಯಿತು.