ಬೆಂಗಳೂರು: ಬಾಂಗ್ಲಾದೇಶದಲ್ಲಿ ಭಾರತೀಯರ ಮೇಲಿನ ಹಲ್ಲೆ, ಹತ್ಯೆ ಹಾಗೂ ಧಾರ್ಮಿಕ ದೇವಸ್ಥಾನಗಳನ್ನು ಕೆಡವಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಬಾಂಗ್ಲಾ ಸರ್ಕಾರವನ್ನು ಆಗ್ರಹಿಸಿ ಹಾಗೂ ಭಾರತೀಯರಿಗೆ ರಕ್ಷಣೆ ನೀಡಬೇಕೆಂದು ಒತ್ತಾಯಿಸಿ ನಗರದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಯುವ ಕಾಂಗ್ರೆಸ್ ನಾಯಕ ಮನೋಹರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಬಾಂಗ್ಲಾದೇಶದಲ್ಲಿ ಭಾರತೀಯರಿಗೆ ರಕ್ಷಣೆ ಒದಗಿಸುವಲ್ಲಿ ಅಲ್ಲಿನ ಸರ್ಕಾರ ವಿಫಲವಾಗಿದೆ. ಕೂಡಲೇ ಇಸ್ಕಾನ್ ಹಾಗೂ ಇತರ ಹಿಂದೂ ಧಾರ್ಮಿಕ ದೇವಸ್ಥಾನಗಳಿಗೆ ಸೂಕ್ತ ರಕ್ಷಣೆ ಒದಗಿಸಬೇಕು. ಹಿಂದೂಗಳ ಮೇಲೆ ಹಲ್ಲೆ ನಡೆಸುತ್ತಿರುವ ಕಿಡಿಗೇಡಿಗಳನ್ನು ಬಂಧಿಸಬೇಕು. ವಿಶ್ವಸಂಸ್ಥೆ ಹಾಗೂ ಅಂತಾರಾಷ್ಟ್ರೀಯ ಮಾನವ ಹಕ್ಕು ಆಯೋಗ ಬಾಂಗ್ಲಾ ದೇಶದಲ್ಲಿ ನಡೆಯುತ್ತಿರುವ ಘೋರ ಘಟನೆಗಳ ಬಗ್ಗೆ ಗಮನಹರಿಸಿ ಸೂಕ್ತ ಕ್ರಮಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮನೋಹರ್ ಮಾತನಾಡಿ, ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಕೂಡಲೆ ತುರ್ತಾಗಿ ಹಿಂದೂಗಳಿಗೆ ರಕ್ಷಣೆ ನೀಡುವಲ್ಲಿ ಕೈಗೊಂಡ ಕ್ರಮಗಳನ್ನು ಬಹಿರಂಗಪಡಿಸಬೇಕು. ಹಿಂದೂಗಳಿಗೆ ರಕ್ಷಣೆ ನೀಡಬೇಕು. ಬಾಂಗ್ಲಾದೇಶ ಉದಯವಾಗಲು ಭಾರತ ಮೂಲಕಾರಣ ಎಂಬುದನ್ನು ಮರೆಯಬಾರದು. ಕೂಡಲೇ ಭಾರತೀಯರಿಗೆ ಹಾಗೂ ಹಿಂದೂ ದೇವಸ್ಥಾನಗಳಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಿದರು.