ಬೆಂಗಳೂರು: ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್ ಆಪ್ತ ಸಹಾಯಕ ರಮೇಶ್ ಆತ್ಮಹತ್ಯೆ ಹಿಂದೆ ಆದಾಯ ತೆರಿಗೆ ಇಲಾಖೆ ಒತ್ತಡ ಇದೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.
ನಗರದ ಮೌರ್ಯ ವೃತ್ತದಲ್ಲಿ ಕಾಂಗ್ರೆಸ್ ಮುಖಂಡ ಮನೋಹರ್ ನೇತೃತ್ವದಲ್ಲಿ ಪ್ರತಿಭಟನೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ರಮೇಶ್ ಸಾವಿಗೆ ಐಟಿ ಅಧಿಕಾರಿಗಳ ಕಿರುಕುಳವೇ ಕಾರಣ. ಐಟಿ ಇಲಾಖೆ ಕೇಂದ್ರ ಸರ್ಕಾರದ ಕೈಗೊಂಬೆಯಾಗಿದೆ. ಮುಗ್ಧ ಅಮಾಯಕರು ಕಿರುಕುಳಕ್ಕೆ ಬಲಿಯಾಗುತ್ತಿದ್ದಾರೆ. ರಮೇಶ್ ಸಾವಿಗೆ ನ್ಯಾಯ ಸಿಗಬೇಕಿದೆ ಎಂದು ಆಗ್ರಹಿಸಿದರು.
ಕಾಂಗ್ರೆಸ್ ಮುಖಂಡ ಮನೋಹರ್ ಮಾತನಾಡಿ, ರಮೇಶ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಕಿರುಕುಳವೇ ಕಾರಣ. ಸಾಯುವ ಮುನ್ನ ರಮೇಶ್ ಹೇಳಿಕೆ ಕೊಟ್ಟಿದ್ದಾರೆ. ಡೆತ್‌ನೋಟ್‌ನಲ್ಲೂ ಐಟಿ ಕಿರುಕುಳದ ಬಗ್ಗೆ ಹೇಳಿದ್ದಾರೆ. ಇದನ್ನು ಗಮನಿಸಿ ಪೊಲೀಸರು ಕ್ರಮ ತೆಗೆದುಕೊಳ್ಳಬೇಕು. ಸಂಬಂಧಿಸಿದ ಅಧಿಕಾರಿಗಳನ್ನು ಬಂಧಿಸಿ, ನಿಷ್ಪಕ್ಷಪಾತವಾಗಿ ವಿಚಾರಣೆ ನಡೆಸಬೇಕು. ಕಾಂಗ್ರೆಸ್ ನಾಯಕರನ್ನು ಕೇಂದ್ರ ಸರ್ಕಾರ ಟಾರ್ಗೆಟ್ ಮಾಡ್ತಿದೆ. ಐಟಿ,ಇಡಿ ಉಪಯೋಗಿಸಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿದರು.