ಬೆಂಗಳೂರು: ಬಿಜೆಪಿ ಸಂಸದ ಪಿ.ಸಿ.ಮೋಹನ್ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಆಸ್ತಿ ವಿವರದಲ್ಲಿ ಕೋಟ್ಯಂತರ ರೂಪಾಯಿ ಆಸ್ತಿ ಮಾಹಿತಿಯನ್ನು ಮರೆಮಾಚಿದ್ದಾರೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ.
ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಯುವ ಕಾಂಗ್ರೆಸ್ ಮುಖಂಡ ಮನೋಹರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಕೂಡಲೇ ಪಿ.ಸಿ.ಮೋಹನ್ ಸಂಸತ್ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು. ಭಾರತೀಯ ಜನತಾ ಪಕ್ಷದ ಶಾಸಕರು, ಸಂಸತ್ ಸದಸ್ಯರು ಹಾಗೂ ಮಂತ್ರಿಗಳಿಗೆ ಭ್ರಷ್ಟಾಚಾರ, ಡಿನೋಟಿಫಿಕೇಷನ್ ಪ್ರಕರಣಗಳು ಮಾಮೂಲಿಯಾಗಿದೆ.
ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರದ ದೇವಸ್ಥಾನ ಟ್ರಸ್ಟ್ಗೆ ಸಂಬಂಧಪಟ್ಟ 40 ಎಕರೆ ಜಾಗವನ್ನು ಪಿ.ಸಿ.ಮೋಹನ್ ತಮ್ಮ ಸ್ವಂತ ಕಂಪನಿ ಹೆಸರಿನಲ್ಲಿ ಖರೀದಿಸಿದ್ದಾರೆ. ಈ ಆಸ್ತಿ ವಿವರವನ್ನು ಚುನಾವಣೆ ಸಂದರ್ಭದಲ್ಲಿ ತಮ್ಮ ಅಫಿಡವಿಟ್ನಲ್ಲಿ ಸಲ್ಲಿಸದೆ ಚುನಾವಣಾ ಆಯೋಗಕ್ಕೆ ಹಾಗೂ ರಾಜ್ಯದ ಜನತೆಗೆ ವಂಚಿಸಿದ್ದಾರೆ. ಆದ್ದರಿಂದ ಕೂಡಲೇ ಸಂಸತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ನ್ಯಾಯಾಲಯದ ಆದೇಶಕ್ಕೆ ತಲೆ ಬಾಗಿ ತನಿಖೆ ಎದುರಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.