ಚಿಕ್ಕೋಡಿ: ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 12 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಂಕೇಶ್ವರ ಬಳಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 4ರ ಸಂಕೇಶ್ವರ ಪಟ್ಟಣದ ಹೊರವಲಯದಲ್ಲಿ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮತ್ತೋರ್ವ ಬಾಲಕಿ ಸಾವು-ಬದುಕಿನ ನಡುವೆ ಹೋರಾಟ ನಡೆಸಿದ್ದಾಳೆ.
ಹುಬ್ಬಳ್ಳಿಯ ನವನಗರದ ನಿವಾಸಿ ಪ್ರಿಯಾ ಮನೋಜ ಪಾಟೀಲ(12) ಮೃತ ಬಾಲಕಿ ಎಂದು ಗುರುತಿಸಲಾಗಿದೆ. ಬಾಲಕಿ ಕುಟುಂಬಸ್ಥರು ಕಾರಿನಲ್ಲಿ ಮಹಾರಾಷ್ಟ್ರದ ಕರಾಡೆಗೆ ಹೋಗುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರ ಸೊಲ್ಲಾಪುರ ಕ್ರಾಸ್ ಬಳಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ಘಟನೆಯಲ್ಲಿ ಕಾರಿನಲ್ಲಿದ್ದ ಆರತಿ ಪಾಟೀಲ ಎಂಬುವವರು ಸೇರಿ ಇಬ್ಬರ ಪರಿಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಘಟನಾ ಸ್ಥಳಕ್ಕೆ ಸಂಕೇಶ್ವರ ಪಿಎಸ್ಐ ಗಣಪತಿ ಕೊಂಗನೊಳಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.