ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕರ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಕಾಕ್ ಪೊಲೀಸರು ಮತ್ತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಅರಬಾವಿ ಪಟ್ಟಣದ ಸ್ವಾಮಿ ವಿವೇಕಾನಂದ ನಗರದ ನಿವಾಸಿ ಮಂಜುನಾಥ ಮಾಳಿ (23), ಪುಂಡಲೀಕ್‌ಬನಾಜ್ (26), ರಾಮಣ್ಣ ಗುಡ್ಡದವಾರಿ(27) ಹಾಗೂ ಮೂಡಲಗಿ ತಾಲೂಕಿನ ಕಲ್ಲೋಳಿ ಗ್ರಾಮದ ಮಹಾದೇವ ದಾಸನಾಳ(26), ಬಂಧಿತರು.
ಬಂಧಿತ ಆರೋಪಿಗಳ ಪೈಕಿ ಮಂಜುನಾಥ ಮಾಳಿ ಪರೀಕ್ಷೆಯಲ್ಲಿ ಅಕ್ರಮ ಎಸಗಲು ಇಲೆಕ್ಟ್ರಾನಿಕ್ ಡಿವೈಸ್‌ಗಳನ್ನು ಮಾಡಿಫೈ ಮಾಡಿದ್ದಲ್ಲದೇ ಆರೋಪಿತರೊಂದಿಗೆ ಸೇರಿಕೊಂಡು ಹಣ ಕೊಟ್ಟ ಹಾಗೂ ಪರೀಕ್ಷೆಗೆ ಕುಳಿತ ಅಭ್ಯರ್ಥಿಗಳಿಗೆ ಇಲೆಕ್ಟ್ರಾನಿಕ್ ಡಿವೈಸ್ ಮೈಕ್ರೋ ಚಿಪ್ಗಳನ್ನು ನೀಡಿದ್ದಾನೆ. ಈತನಿಂದ ಅಕ್ರಮಕ್ಕೆ ಬಳಸಿದ್ದ ಮೊಬೈಲ್ ಮತ್ತು ಡಸ್ಟರ್ ಕಾರ್‌ನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.
ಇನ್ನುಳಿದ ಮೂವರು ಆರೋಪಿಗಳು ಕೆಪಿಟಿಸಿಎಲ್ ಜ್ಯೂನಿಯರ್ ಅಸಿಸ್ಟೆಂಟ್ ಪರೀಕ್ಷೆಗೆ ಇಲೆಕ್ಟ್ರಾನಿಕ್ ಡಿವೈಸ್ ಮತ್ತು ಮೈಕ್ರೋಚಿಪ್ ತೆಗೆದುಕೊಂಡು ಹೋಗಿ ಪರೀಕ್ಷೆ ಬರೆದಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಮೂವರಿಂದ ದಾಖಲೆಗಳನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಕಳೆದ ಆ.07ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದಲ್ಲಿ ನಡೆದಿದ್ದ ಕೆಪಿಟಿಸಿಎಲ್ ಕಿರಿಯ ಸಹಾಯಕರ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿದ್ದ ಆರೋಪಿಗಳ ವಿರುದ್ಧ ಬೆಳಗಾವಿ ಜಿಲ್ಲಾ ಪೊಲೀಸರು ಸಮರ ಸಾರಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಂಧಿತರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ. ಸದ್ಯ ತನಿಖೆ ಮುಂದುವರಿಸಿರುವ ಪೊಲೀಸರು ಕೆಪಿಟಿಸಿಎಲ್ ಪರೀಕ್ಷೆ ಅಕ್ರಮದಲ್ಲಿ ಭಾಗಿಯಾಗಿರುವ ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ.
ಇದನ್ನೂ ಓದಿ: ಕೆಪಿಟಿಸಿಎಲ್ ಅಕ್ರಮ ನೇಮಕಾತಿ ಪ್ರಕರಣ: ಮತ್ತೆ ಇಬ್ಬರ ಬಂಧನ.. ಆರೋಪಿಗಳ ಸಂಖ್ಯೆ 22ಕ್ಕೆ ಏರಿಕೆ