ಬೆಳಗಾವಿ: ಇತ್ತೀಚಿನ ಪ್ರವಾಹ ಹಾಗೂ ಧಾರಾಕಾರ ಮಳೆಯಿಂದಾಗಿ ಸಣ್ಣ ನೀರಾವರಿ ಇಲಾಖೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಒಟ್ಟಾರೆ 454 ಕೋಟಿ ರೂಪಾಯಿ ನಷ್ಟ ಉಂಟಾಗಿದೆ ಎಂದು ಸಣ್ಣ ನೀರಾವರಿ ಇಲಾಖೆಯ ಸಚಿವರಾದ ಜೆ ಸಿ ಮಾಧುಸ್ವಾಮಿ ತಿಳಿಸಿದರು.
ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹದಿಂದ ಹಾನಿಗೊಳಗಾಗಿರುವ ವಿವಿಧ ಬ್ಯಾರೇಜ್ಗಳು ಮತ್ತು ಏತ ನೀರಾವರಿ ಯೋಜನೆ ವ್ಯವಸ್ಥೆಯನ್ನು ಪರಿಶೀಲಿಸಿ ಅವರು ಮಾತನಾಡಿದರು.
ಬೆಳಗಾವಿ, ಕಾರವಾರ, ಹಾವೇರಿ, ವಿಜಯಪುರ, ಕೊಪ್ಪಳದಲ್ಲಿ ಪ್ರವಾಹದಿಂದ ಹಾನಿ ಪ್ರಮಾಣ ಜಾಸ್ತಿಯಾಗಿದೆ. ಸಂಪರ್ಕ ಕಡಿತಗೊಂಡಿರುವ ಸ್ಥಳಗಳಿಗೆ ಸಂಪರ್ಕ ಕಲ್ಪಿಸುವುದಕ್ಕೆ ಇಲಾಖೆ ವತಿಯಿಂದ ಮೊದಲ ಆದ್ಯತೆ ನೀಡಲಾಗುತ್ತಿದೆ. ಹಾನಿಗೊಳಗಾದ ಬ್ಯಾರೇಜ್ಗಳಲ್ಲಿ ತಕ್ಷಣಕ್ಕೆ ನೀರು ನಿಲ್ಲಿಸಲಾಗುವುದು. ನಂತರ ಎತ್ತರ ಹೆಚ್ಚಿಸಲು, ರಸ್ತೆ, ಸೇತುವೆ ಮತ್ತಿತರ ಶಾಶ್ವತ ಪರಿಹಾರ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಸಚಿವ ಮಾಧುಸ್ವಾಮಿ ತಿಳಿಸಿದರು.
ಐದು ಲಕ್ಷಕ್ಕಿಂತ ಕಡಿಮೆ ಅನುದಾನದಲ್ಲಿ ಕೈಗೊಳ್ಳಬಹುದಾದ ಕೆಲಸಗಳನ್ನು ಕೂಡಲೇ ಆರಂಭಿಸಲಾಗುವುದು. ಅದಕ್ಕಿಂತ ಹೆಚ್ಚಿನ ಮೊತ್ತದ ಕಾಮಗಾರಿಗಳಿಗೆ ಟೆಂಡರ್ ಪ್ರಕ್ರಿಯೆ ನಡೆಸಬೇಕಿರುವುದರಿಂದ ಸ್ವಲ್ಪ ಕಾಲಾವಕಾಶ ಬೇಕಾಗುತ್ತದೆ ಎಂದರು.
ಕೇಂದ್ರದಿಂದ 11 ಕೋಟಿ ಪರಿಹಾರ ಸಾಧ್ಯ: ರಾಜ್ಯದಲ್ಲಿ ಸಣ್ಣ ನೀರಾವರಿ ಇಲಾಖೆಗೆ ಸಂಬಂಧಿಸಿದಂತೆ 454 ಕೋಟಿ ರೂಪಾಯಿ ಹಾನಿಯಾಗಿದ್ದರೂ ಕೇಂದ್ರ ಸರ್ಕಾರದಿಂದ ಎನ್‌ಡಿಆರ್‌ಎಫ್ ಮಾರ್ಗಸೂಚಿ ಪ್ರಕಾರ ಕೇವಲ 11 ಕೋಟಿ ರೂಪಾಯಿ ಮಾತ್ರ ಪರಿಹಾರ ಲಭಿಸುವುದು ಸಾಧ್ಯವಾಗಲಿದೆ. ಆದ್ದರಿಂದ ದುರಸ್ತಿ ಹಾಗೂ ಪುನರ್ ನಿರ್ಮಾಣ ಕಾಮಗಾರಿಗಳನ್ನು ರಾಜ್ಯ ಸರ್ಕಾರದಿಂದಲೇ ಕೈಗೆತ್ತಿಕೊಳ್ಳಬೇಕಾಗುತ್ತದೆ ಎಂದು ಸಚಿವ ಜೆ ಸಿ ಮಾಧುಸ್ವಾಮಿ ವಿವರಿಸಿದರು.
ಬೆಳಗಾವಿಯಲ್ಲಿ 55 ಕೋಟಿ ನಷ್ಟ: ಪ್ರವಾಹದಿಂದ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟಾರೆ 55 ಕೋಟಿ ರೂಪಾಯಿ ನಷ್ಟವಾಗಿದೆ. ಹಂತ ಹಂತವಾಗಿ ಹಾನಿಗೊಳಗಾದ ಯೋಜನೆಗಳಲ್ಲಿ ದುರಸ್ತಿ ಮತ್ತು ಪುನರ್ ನಿರ್ಮಾಣ ಕಾರ್ಯ ಆರಂಭಿಸಲಾಗುವುದು ಎಂದು ಅವರು ತಿಳಿಸಿದರು.