ಬೆಳಗಾವಿ: ಕೊರೊನಾ 2ನೇ ಅಲೆ ಹಾವಳಿ ಮಧ್ಯೆಯೇ ರಾಜ್ಯ ಸರ್ಕಾರ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸಲು ನಿರ್ಧರಿಸಿದೆ. ಸರ್ಕಾರದ ಈ ನಿರ್ಧಾರ ಗಡಿ ಜಿಲ್ಲೆ ಬೆಳಗಾವಿಯ ಕೆಲ ವಿದ್ಯಾರ್ಥಿಗಳು ಹಾಗೂ ಪೋಷಕರನ್ನು ಆತಂಕಕ್ಕೆ ಸಿಲುಕಿಸಿದೆ. ಏಕೆಂದರೆ ರಾಜ್ಯದಲ್ಲಿ ವ್ಯಾಸಂಗ ಮಾಡುತ್ತಿರುವ ಮಹಾರಾಷ್ಟ್ರದ ವಿದ್ಯಾರ್ಥಿಗಳು ಹಾಜರಾಗುತ್ತಿರುವುದೇ ಆತಂಕಕ್ಕೆ ಕಾರಣವಾಗಿದೆ.
ಕೊರೊನಾ ರೂಪಾಂತರಿ ವೈರಸ್ ಡೆಲ್ಟಾ ಫ್ಲಸ್ ಮಹಾರಾಷ್ಟ್ರದಲ್ಲಿ ಅಟ್ಟಹಾಸ ಮೆರೆಯುತ್ತಿದೆ. ಹೀಗಾಗಿ ಮಹಾರಾಷ್ಟ್ರದಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಬೆಳಗಾವಿಗೆ ಬರುತ್ತಿದ್ದಾರೆ. ಈ ಕಾರಣ ಇಲ್ಲಿನ ವಿದ್ಯಾರ್ಥಿಗಳ ಜೊತೆಗೆ ಪೋಷಕರಿಗೂ ಆತಂಕಕ್ಕೂ ಕಾರಣವಾಗಿದೆ. ಮಹಾರಾಷ್ಟ್ರದಿಂದ ಜಿಲ್ಲೆಯ ವಿವಿಧ ತಾಲೂಕುಗಳ ಪರೀಕ್ಷಾ ಕೇಂದ್ರಗಳಲ್ಲಿ 500 ಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈ ವಿದ್ಯಾರ್ಥಿಗಳ ಆಗಮನ ಇತರ ವಿದ್ಯಾರ್ಥಿಗಳ ಆತಂಕಕ್ಕೆ ಕಾರಣವಾಗಿದೆ.
ಪ್ರತ್ಯೇಕ ಕೊಠಡಿ ನಿರ್ಮಾಣಕ್ಕೆ ಹಿಂದೇಟು?
ಜಿಲ್ಲೆಯ ವಿವಿಧ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಮಹಾರಾಷ್ಟ್ರದ 500 ಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಅವರೆಲ್ಲ ಮುಂದಿನ ತಿಂಗಳು ರಾಜ್ಯದಲ್ಲಿ
ನಡೆಯುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಹಾಜರಾಗಲಿದ್ದಾರೆ. ಮಹಾರಾಷ್ಟ್ರದಲ್ಲಿ ಡೆಲ್ಟಾಪ್ಲಸ್ ವೈರಾಣು ಪತ್ತೆಯಾಗಿದ್ದರೂ ಜಿಲ್ಲಾಡಳಿತ ಅಲ್ಲಿನ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲು ಹಿಂದೇಟು ಹಾಕುತ್ತಿದೆ.
ಎಲ್ಲ ವಿದ್ಯಾರ್ಥಿಗಳ ಜೊತೆಗೆ ಮಹಾರಾಷ್ಟ್ರ ಮೂಲದ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈ ಬೆಳವಣಿಗೆ ಸಹಜವಾಗಿಯೇ ಜಿಲ್ಲೆಯ ವಿದ್ಯಾರ್ಥಿಗಳ ಹಾಗೂ ಪೋಷಕರ ಆತಂಕಕ್ಕೆ ಕಾರಣವಾಗಿದೆ. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಒಟ್ಟು 415 ಪರೀಕ್ಷಾ ಕೊಠಡಿ ತೆರೆಯಲು ನಿರ್ಧರಿಸಲಾಗಿದ್ದು, ಒಟ್ಟು 80,357 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಸೋಂಕಿನ ಲಕ್ಷಣಗಳಿದ್ದರೆ ಮಾತ್ರ ಕೋವಿಡ್ ಟೆಸ್ಟ್!
ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚಿವೆ. ಅಲ್ಲದೇ ಅಲ್ಲಿ ರೂಪಾಂತರಿ ವೈರಾಣುಗಳು ಅಧಿಕ ಪ್ರಮಾಣದಲ್ಲಿ ಪತ್ತೆಯಾಗುತ್ತಿವೆ. ಈ ಕಾರಣಕ್ಕೆ ಜಿಲ್ಲಾಡಳಿತ ಜಿಲ್ಲೆಯ ಗಡಿಭಾಗಗಳಲ್ಲಿ 27 ಚೆಕ್ ಪೋಸ್ಟ್ ತೆರೆದಿವೆ. ಅಲ್ಲದೇ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವ ಎಲ್ಲ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯಗೊಳಿಸಲಾಗಿದೆ.
ಪ್ರಯಾಣಿಕರ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯಗೊಳಿಸಿರುವ ಜಿಲ್ಲಾಡಳಿತ ವಿದ್ಯಾರ್ಥಿಗಳಿಗೆ ಮಾತ್ರ ಈ ನಿಯಮ ಜಾರಿಗೊಳಿಸಿಲ್ಲ. ರಾಜ್ಯದಲ್ಲಿ ಪರೀಕ್ಷೆ ಬರೆಯಲಿರುವ ಮಹಾರಾಷ್ಟ್ರ ಮೂಲದ ವಿದ್ಯಾರ್ಥಿಗಳಿಗೆ ಕೋವಿಡ್ ಲಕ್ಷಣಗಳಿದ್ದರೆ ಮಾತ್ರ ಟೆಸ್ಟ್ ಮಾಡಲು ನಿರ್ಧರಿಸಿದೆ. ಸಾಮಾನ್ಯ ವಿದ್ಯಾರ್ಥಿಗಳ ರಾಜ್ಯ ಪ್ರವೇಶಕ್ಕೆ ಅನುಕೂಲ ಕಲ್ಪಿಸಿರುವುದು ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ.