ಚಿಕ್ಕೋಡಿ: ದಿನದಿಂದ ದಿನಕ್ಕೆ ದೇಶಾದ್ಯಂತ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಅದರಲ್ಲೂ ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ಸೋಂಕು ಹರಡದಂತೆ ತಡೆಗಟ್ಟುವುದು ಅತ್ಯವಶ್ಯಕವಾಗಿದೆ. ಹೀಗಾಗಿ ಚಿಕ್ಕೋಡಿ ಲೋಕಸಭಾ ಸಂಸದ ಅಣ್ಣಾಸಾಹೇಬ ಜೊಲ್ಲೆ ಕೊರೊನಾ ತಡೆಗಟ್ಟಲು ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆಯಲು ತಮ್ಮ ಕ್ಷೇತ್ರದ ಪ್ರತಿ ಗ್ರಾಮಗಳಿಗೆ ಭೇಟಿ ನೀಡುತ್ತಿದ್ದಾರೆ.
ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಕಾಗವಾಡ ಮತಕ್ಷೇತ್ರದ ಚಮಕೇರಿ, ಬೇಡರಹಟ್ಟಿ ಗ್ರಾಮಗಳಿಗೆ ಸಂಸದ ಅಣ್ಣಾಸಾಹೇಬ ಜೊಲ್ಲೆ ಭೇಟಿ ನೀಡಿದ್ದಾರೆ. ಗ್ರಾಮದ ಮುಖಂಡರು, ಅಧಿಕಾರಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಸಭೆ ನಡೆಸಿ, ಕೋವಿಡ್-19 ಹರಡದಂತೆ ತಡೆಗಟ್ಟಲು ತೆಗೆದುಕೊಳ್ಳಲಾದ ಕ್ರಮಗಳ ಕುರಿತು ಮಾಹಿತಿ ಪಡೆದರು.
ಮೇ 17ರವರೆಗೆ ಲಾಕ್‌ಡೌನ್ ಜಾರಿಯಲ್ಲಿದೆ. ಯಾರೂ ಕೂಡ ಗುಂಪು ಗುಂಪಾಗಿ ಸೇರದೆ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಂಡು ದಿನನಿತ್ಯದ ಸಾಮಗ್ರಿಗಳನ್ನು ಖರೀದಿಸಬೇಕು. ಪ್ರಧಾನಿ ನರೇಂದ್ರ ಮೋದಿಯವರು ಕರೆ ನೀಡಿರುವಂತೆ ಸಪ್ತ ನಿಯಮಗಳನ್ನು ಪಾಲಿಸುವಂತೆ ಸಾರ್ವಜನಿಕರಿಗೆ ಸೂಚಿಸಿದರು.