ಬೆಳಗಾವಿ: ಕೋವಿಡ್-19 ಸೋಂಕಿಗೆ ಸಂಬಂಧಿಸಿದಂತೆ ಇತ್ತೀಚೆಗೆ ಹೊಸದಾಗಿ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದ ಒಟ್ಟು ಆರು ಮಾದರಿಗಳ ಪೈಕಿ ಎಲ್ಲ ಆರು ವರದಿಗಳು ನೆಗೆಟಿವ್ ಬಂದಿವೆ ಎಂದು ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಿಂದ ಇದುವರೆಗೆ ಒಟ್ಟು 27 ಮಾದರಿಗಳನ್ನು ಕಳಿಸಲಾಗಿತ್ತು. ಇಂದು ಬಂದಿರುವ ವರದಿಯ ಪ್ರಕಾರ ಎಲ್ಲ 27 ಮಾದರಿಗಳು ನೆಗೆಟಿವ್ ಬಂದಿವೆ ಎಂದು ತಿಳಿಸಿದ್ದಾರೆ.
ಇದುವರೆಗೆ 21 ಮಾದರಿಗಳ ವರದಿ ನೆಗೆಟಿವ್ ಬಂದಿದ್ದು, ಇಂದಿನ ಆರು ಪ್ರಕರಣಗಳ ವರದಿ ಕೂಡ ನೆಗೆಟಿವ್ ಬಂದಿವೆ. ಜನರು ವದಂತಿಗಳಿಗೆ ಕಿವಿಗೊಡದೆ ಸರ್ಕಾರದ ಸೂಚನೆ ಮೇರೆಗೆ ಎಲ್ಲ ರೀತಿಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ತಿಳಿಸಿದ್ದಾರೆ.
ಮರ್ಕಜ್ ಧಾರ್ಮಿಕ ಸಭೆ: 62 ಜನರಲ್ಲಿ ರೋಗದ ಲಕ್ಷಣಗಳಿಲ್ಲ
ನವದೆಹಲಿಯ ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದ ಜಿಲ್ಲೆಯ ಒಟ್ಟು 62 ಜನರಲ್ಲಿ ಯಾರಿಗೂ ರೋಗದ ಲಕ್ಷಣಗಳು ಕಂಡುಬಂದಿಲ್ಲ. 42 ಜನರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ 33 ಜನರ ಗಂಟಲು ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳಿಸಲಾಗಿದೆ.
ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದವರು ಮತ್ತೆ ಯಾರಾದರೂ ಇದ್ದಲ್ಲಿ ತಕ್ಷಣವೇ ಸ್ವಯಂ ಪ್ರೇರಣೆಯಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಪರೀಕ್ಷಿಸಿಕೊಂಡು ಜಿಲ್ಲಾಡಳಿಕ್ಕೆ ಮಾಹಿತಿಯನ್ನು ನೀಡಬೇಕು. ಮರ್ಕಜ್ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡೂ ಮಾಹಿತಿಯನ್ನು ಮುಚ್ಚಿಟ್ಟರೆ ಅಂತಹವರ ವಿರುದ್ಧ ಸಮಾಜದ ಆರೋಗ್ಯದ ದೃಷ್ಟಿಯಿಂದ ಪ್ರಕರಣ ದಾಖಲಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದವರ ಬಗ್ಗೆ ಸಾರ್ವಜನಿಕರು ಕೂಡ ಆಯಾ ತಾಲೂಕಿನ ತಹಶೀಲ್ದಾರರು ಅಥವಾ ಜಿಲ್ಲಾಧಿಕಾರಿ ಕಚೇರಿಗೆ ಮಾಹಿತಿಯನ್ನು ನೀಡಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.