ಬೆಂಗಳೂರು: ಕೋವಿಡ್ನಿಂದ ಸಂಕಷ್ಟಕ್ಕೆ ಸಿಲುಕಿರುವ ನೇಕಾರರು ತಯಾರಿಸಿದ ಸೀರೆ ಹಾಗೂ ಸಮವಸ್ತ್ರಗಳನ್ನು ಖರೀದಿ ಮಾಡಲು ಸರ್ಕಾರ ಮುಂದಾಗಬೇಕೆಂದು ವಿಧಾನಸಭೆಯಲ್ಲಿ ಆಡಳಿತ ಪಕ್ಷದ ಶಾಸಕರೇ ಒತ್ತಾಯಿಸಿದರು.
ಪ್ರಶ್ನೋತ್ತರ ವೇಳೆ ವಿಷಯ ಪ್ರಸ್ತಾಪಿಸಿದ ಬಿಜೆಪಿ ಶಾಸಕ ಸಿದ್ದು ಸವದಿ, ಕೊರೊನಾ ಕಾರಣದಿಂದ ನೇಕಾರರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ಅವರಿಗೆ ತಿಂಗಳಿಗೆ 2 ಸಾವಿರ ಪರಿಹಾರ ನೀಡಿದರೂ ಪ್ರಯೋಜನವಾಗುತ್ತಿಲ್ಲ. ಹೀಗಾಗಿ ಸೀರೆ ಮತ್ತು ಸಮವಸ್ತ್ರಗಳನ್ನು ಖರೀದಿ ಮಾಡಲು ಮುಂದಾಗಬೇಕೆಂದು ಮನವಿ ಮಾಡಿದರು.
ಇದನ್ನೂ ಓದಿ : ಪ್ರತಿಪಕ್ಷಗಳ ಪ್ರತಿಭಟನೆ ನಡುವೆಯೇ ವಿಧಾನಸಭೆಯಲ್ಲಿ ಗೋ ಹತ್ಯೆ ನಿಷೇಧ ವಿಧೇಯಕ ಅಂಗೀಕಾರ!
ಇದಕ್ಕೆ ದನಿಗೂಡಿಸಿದ ಬಿಜೆಪಿ ಶಾಸಕ ಅಭಯ್ ಪಾಟೀಲ್, ನನ್ನ ಮತ ಕ್ಷೇತ್ರದಲ್ಲೂ ಸಾಕಷ್ಟು ನೇಕಾರರು ಇದ್ದಾರೆ. ಕೋವಿಡ್ ನಂತರ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈಗ ಬಹುತೇಕ ಮಂದಿ ಆತ್ಮಹತ್ಯೆ ಮಾಡಿಕೊಳ್ಳುವ ಹಂತಕ್ಕೆ ತಲುಪಿದ್ದಾರೆ. ಕೂಡಲೇ ಸರ್ಕಾರ ಅವರ ರಕ್ಷಣೆಗೆ ಧಾವಿಸಬೇಕು. ಇಲ್ಲದಿದ್ದರೆ ದೊಡ್ಡ ಅನಾಹುತವಾಗುತ್ತದೆ ಎಂದರು.
ಇದಕ್ಕೆ ಉತ್ತರಿಸಿದ ಸಚಿವೆ ಶಶಿಕಲಾ ಜೊಲ್ಲೆ, ನಮ್ಮ ಇಲಾಖೆ ವತಿಯಿಂದ ನೇಕಾರರು ಉತ್ಪಾದನೆ ಮಾಡಿದ 6 ಲಕ್ಷ ಸೀರೆಗಳನ್ನು 30 ಕೋಟಿ ವೆಚ್ಚದಲ್ಲಿ ಖರೀದಿಸಲು ತೀರ್ಮಾನಿಸಲಾಗಿತ್ತು. ಆದರೆ ಕೋವಿಡ್‍ನಿಂದಾಗಿ ಸಾಧ್ಯವಾಗಲಿಲ್ಲ. ಮತ್ತೊಮ್ಮೆ ಮುಖ್ಯಮಂತ್ರಿಗಳು ಹಾಗೂ ಹಣಕಾಸು ಅಧಿಕಾರಿಗಳ ಜೊತೆ ಚರ್ಚಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದರು.