ಬೆಳಗಾವಿ: ಸೇವಾ ಭದ್ರತೆ, ಅಗತ್ಯ ವೇತನ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ ನಗರದ ಚೆನ್ನಮ್ಮ ವೃತ್ತದಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.
ಈ ವೇಳೆ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ ಅವರು, ಸೇವಾ ಭದ್ರತೆ, ಅಗತ್ಯ ವೇತನ ಸೇರಿ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ನಮಗೆ ಸುರಕ್ಷಿತ ಸಾಧನಗಳಿಲ್ಲದೇ ಸರ್ಕಾರ ಕೊರೊನಾ ಸೋಂಕು ತಡೆ ಕಾರ್ಯಾಚರಣೆಯಲ್ಲಿ ನಮ್ಮನ್ನು ಬಳಸಿಕೊಳ್ಳಲಾಗುತ್ತಿದೆ. ವೇತನ, ಸೌಲಭ್ಯ ಯಾವುದೂ ಇಲ್ಲ. ಸರ್ಕಾರ ಕೂಡಲೇ ಕ್ರಮ ಕೈಗೊಂಡು ಆಶಾ ಕಾರ್ಯಕರ್ತೆಯರ ನೆರವಿಗೆ ಬರಬೇಕು. ಜೊತೆಗೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು 12 ಸಾವಿರ ವೇತನ ನೀಡಬೇಕು. ನಮ್ಮ ಸೇವೆಯನ್ನು ಖಾಯಂ ಮಾಡಬೇಕು. ಸರ್ಕಾರ ಸೂಕ್ತ ಕ್ರಮಕೈಗೊಳ್ಳುವವರೆಗೂ ಕರ್ತವ್ಯಕ್ಕೆ ಹಾಜರಾಗುವುದಿಲ್ಲ ಎಂದು ತಿಳಿಸಿದರು.
ಜಿಲ್ಲಾದ್ಯಂತ ತಾಲೂಕು ಕೇಂದ್ರಗಳಲ್ಲಿಯೂ ಪ್ರತಿಭಟನೆಗಳು ನಡೆದಿದ್ದು, 3800ಕ್ಕೂ ಹೆಚ್ಚು ಆಶಾ ಕಾರ್ಯಕರ್ತರು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.