ಬೆಳಗಾವಿ: ಫೇಕ್ ಸಿಡಿ ಅಂತಾ ವರದಿ ಬಂದ್ರೆ ತತ್‌ಕ್ಷಣವೇ ರಮೇಶ್ ಜಾರಕಿಹೊಳಿಯನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಜೆಡಿಎಸ್ ಮುಖಂಡ ಅಶೋಕ ಪೂಜಾರಿ ಹೇಳಿದರು.
ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಹಿರಂಗ ಪ್ರಕರಣದಲ್ಲಿ ಉನ್ನತ ಮಟ್ಟದ ತನಿಖೆ ನಡೆಸಬೇಕು. ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ರಿಲೀಸ್ ಆದಾಗ ಅವರ ರಾಜೀನಾಮೆಗೆ ಆಗ್ರಹಿಸಿದ್ವಿ. ಅವರು ಕೂಡ ನೈತಿಕ ಹೊಣೆಹೊತ್ತು ರಾಜೀನಾಮೆ ಕೊಟ್ಟಿದ್ದಾರೆ. ಇದೀಗ ಇದು ನಕಲಿ ಸಿಡಿ ಅಂತಾ ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಹೇಳುತ್ತಿದ್ದಾರೆ. ಸರ್ಕಾರ ಮತ್ತು ಪೊಲೀಸ್ ಇಲಾಖೆ ಈ ವಿವಾದಕ್ಕೆ ತೆರೆ ಎಳೆಯಬೇಕು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಉನ್ನತಮಟ್ಟದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಅಧಿಕೃತವಾಗಿ ವಿಧಿವಿಜ್ಞಾನ ಇಲಾಖೆಯಿಂದ ಸಿಡಿ ನಕಲಿ ಅಂತಾ ವರದಿ ಬರಬೇಕು. ರಾಸಲೀಲೆ ಸಿಡಿಯನ್ನು ಎಫ್‌ಎಸ್‌ಎಲ್‌ಗೆ ಕಳಿಸಿ ಸತ್ಯಾಸತ್ಯತೆ ಪರಿಶೀಲಿಸಬೇಕು. ಫೇಕ್ ಸಿಡಿ ಅಂತಾ ವರದಿ ಬಂದ್ರೆ ತತ್‌ಕ್ಷಣವೇ ರಮೇಶ್ರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಅಶೋಕ್ ಪೂಜಾರಿ ಆಗ್ರಹಿಸಿದರು.
ಇದಲ್ಲದೇ ಮುಂಬರುವ ಏಳೆಂಟು ದಿನಗಳಲ್ಲಿ ಬೆಳಗಾವಿಯ ಸುವರ್ಣಸೌಧಕ್ಕೆ ರಾಜ್ಯ ಸರ್ಕಾರದ ಕಾರ್ಯದರ್ಶಿ ಮಟ್ಟದ ಕಚೇರಿಗಳನ್ನು ಸ್ಥಳಾಂತರಿಸಬೇಕು. ಇಲ್ಲದಿದ್ರೆ ಮಾ. 22ರಂದು ಸುವರ್ಣಸೌಧ ಮುಂಭಾಗದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.