ಬೆಳಗಾವಿ : ಅಂತರ್ಜಲ ಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ವಿವಿಧ ಯೋಜನೆಗಳನ್ನು ರೂಪಿಸಬೇಕು. ಕೇವಲ ಮಳೆಗಾಲದ ಸಮಯದಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವ ಕೆಲಸ ಆಗಬಾರದು. ಎಲ್ಲ ಸಮಯದಲ್ಲೂ ನಿರಂತರ ಕಾರ್ಯ ನಡೆಯಬೇಕು ಎಂದು ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಸಚಿವಾಲಯದ ಕಾರ್ಯದರ್ಶಿ ಗಿರೀಶ್ ಹೊಸೂರ್ ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಜಲಶಕ್ತಿ ಅಭಿಯಾನ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಸಚಿವಾಲಯದ ಕಾರ್ಯದರ್ಶಿ ಗಿರೀಶ್ ಹೊಸೂರ್, ಅಂತರ್ಜಲ ಮಟ್ಟ ಹೆಚ್ಚಿಸಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಬೇಕು. ರಾಜ್ಯ ಅಥವಾ ಕೇಂದ್ರ ಸರ್ಕಾರದ ಯೋಜನೆ ಎನ್ನದೆ ಕಾರ್ಯ ನಿರ್ವಹಿಸಬೇಕು. ನಮ್ಮ ಗುರಿ ಅಂತರ್ಜಲ ಮಟ್ಟ ಹೆಚ್ಚಿಸುವುದು ಆಗಿರಬೇಕು. ಆ ನಿಟ್ಟಿನಲ್ಲಿ ಎಲ್ಲ ಅಧಿಕಾರಿಗಳು ಪರಿಣಾಮಕಾರಿಯಾಗಿ ಕೆಲಸ ಮಾಡುವಂತೆ ಸೂಚಿಸಿದರು.
ಇದೇ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಬೊಮ್ಮನಹಳ್ಳಿ, ಅಥಣಿ, ರಾಮದುರ್ಗ, ಸವದತ್ತಿ ತಾಲೂಕುಗಳನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕು. ಇದರ ಜೊತೆಗೆ ಇನ್ನುಳಿದ ತಾಲೂಕುಗಳಲ್ಲಿಯೂ ಅಂತರ್ಜಲ ಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು. ಸ್ವಯಂ ಸೇವಾ ಸಂಸ್ಥೆಗಳು, ಸ್ತ್ರೀ ಸಂಘಗಳು, ಸೇರಿ ವಿವಿಧ ಸಂಘ-ಸಂಸ್ಥೆಗಳು ಮತ್ತು ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಜಲಶಕ್ತಿ ಅಭಿಯಾನ ಕುರಿತು ಜಾಗೃತಿ ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.