ಬೆಳಗಾವಿ : ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆ ಇಂದು ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿತ್ತು. ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಕೇಂದ್ರದ ಸುತ್ತಲೂ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.
58 ವಾರ್ಡ್ಗಳಿಗೆ ನಡೆಯುವ ಚುನಾವಣೆಗೆ ನಾಮಮತ್ರ ಸಲ್ಲಿಸಲು ಪಾಲಿಕೆ ಕಚೇರಿ ಸೇರಿ 12 ಕೇಂದ್ರದಲ್ಲಿ ಅವಕಾಶ ಕಲ್ಪಿಸಲಾಗಿತ್ತು. ಕಾಂಗ್ರೆಸ್, ಬಿಜೆಪಿ, ಎಂಇಎಸ್, ಆಮ್ ಆದ್ಮಿ ಪಾರ್ಟಿ, ಜೆಡಿಎಸ್, ಎಎಂಐಎಂ ಹಾಗೂ ಪಕ್ಷೇತರ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು.
ಬಿಜೆಪಿಯಲ್ಲಿ ಮುಗಿಯದ ಟಿಕೆಟ್ ಗೊಂದಲ : ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಣೆ ಮಾಡಿ ನಿನ್ನೆ ಮಧ್ಯರಾತ್ರಿಯೇ ಪಕ್ಷದ ಅಭ್ಯರ್ಥಿಗಳನ್ನು ಕರೆಯಿಸಿ ಟಿಕೆಟ್ ಫೈನಲ್ ಮಾಡಿ 'ಬಿ' ಫಾರ್ಮ್ ನೀಡಲಾಗಿದೆ. ಹೀಗಾಗಿ, ಕಾಂಗ್ರೆಸ್ ಅಭ್ಯರ್ಥಿಗಳು ಒಬ್ಬೊಬ್ಬರಾಗಿ ಬಂದು ನಾಮಪತ್ರ ಸಲ್ಲಿಸಿದರು.
ಆದರೆ, ಬಿಜೆಪಿ ಪಕ್ಷದಿಂದ ನಿನ್ನೆ ರಾತ್ರಿ ಮೊದಲ ಹಂತದಲ್ಲಿ 21 ಮತ್ತು ಎರಡನೇ ಹಂತದ 13 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಇನ್ನುಳಿದ ಅಭ್ಯರ್ಥಿಗಳು ಆಯ್ಕೆ ಆಗದ ಹಿನ್ನೆಲೆ ಕೆಲ ಅಭ್ಯರ್ಥಿಗಳು ಸ್ವತಂತ್ರವಾಗಿಯೇ ಬಂದು ನಾಮಪತ್ರ ಸಲ್ಲಿಸಿ ಹೋದರು. ಇದಲ್ಲದೇ ಎರಡು ಪಕ್ಷದ ಟಿಕೆಟ್ ವಂಚಿತ ಅಭ್ಯರ್ಥಿಗಳ ಕೂಡ ಬಂಡಾಯ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.
ಪ್ರಚಾರದ ವೇಳೆ ಕೋವಿಡ್ ನಿಯಮ ಉಲ್ಲಂಘಿಸಿದ್ರೆ ಕ್ರಮ : ರಾಜ್ಯ ಸರ್ಕಾರ ಹೊರಡಿಸಿದ ಕೊರೊನಾ ಮಾರ್ಗಸೂಚಿಗಳನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಪಾಲಿಸಬೇಕು. ಈ ಕುರಿತು ಪೊಲೀಸ್ ಇಲಾಖೆ ಕೂಡ ತಿಳುವಳಿಕೆ ಮೂಡಿಸಿದೆ. ಇಷ್ಟಾದರೂ ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡಿದ್ರೆ ಕಾನೂನು ರೀತಿ ಕ್ರಮಕೈಗೊಳ್ಳಲಾಗುತ್ತದೆ ಎಂದು ಡಿಸಿಪಿ ಡಾ.ವಿಕ್ರಮ ಆಮಟೆ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತಾನಡಿದ ಅವರು, ನಾಮಪತ್ರ ಸಲ್ಲಿಸಿರುವ ಅಭ್ಯರ್ಥಿಗಳಿಗೆ ನಾವು ಈಗಾಗಲೇ ಚುನಾವಣೆ ಪ್ರಚಾರ ಯಾವ ರೀತಿ ಮಾಡಬೇಕು ಎಂಬ ಬಗ್ಗೆ ಮಾರ್ಗಸೂಚಿಗಳನ್ನು ನೀಡಿದ್ದೇವೆ. ಐದಕ್ಕಿಂತ ಹೆಚ್ಚು ಜನರು ಪ್ರಚಾರಕ್ಕೆ ಹೋಗುವಂತಿಲ್ಲ.
ಮನೆ ಮನೆಗೆ ಹೋಗಿ ಪ್ರಚಾರ ಮಾಡಬೇಕು. ಪ್ರಚಾರಕ್ಕೆ ಎಲೆಕ್ಟ್ರಾನಿಕ್ ಮಾಧ್ಯಮಗಳನ್ನು ಹೆಚ್ಚಾಗಿ ಬಳಸುವಂತೆ ಸೂಚಿಸಲಾಗಿದೆ. ಅದನ್ನೂ ಮೀರಿ ನಿಯಮ ಉಲ್ಲಂಘಿಸಿದ್ರೆ ಕಾನೂನು ಕ್ರಮಕೈಗೊಳ್ಳುತ್ತೇವೆ ಎಂದು ಎಚ್ಚರಿಸಿದರು.
ಈಗಾಗಲೇ ಪಾಲಿಕೆ ವ್ಯಾಪ್ತಿಯಲ್ಲಿ ಸೂಕ್ಷ್ಮ ಪ್ರದೇಶಗಳನ್ನು ನಾವು ಗುರುತಿಸಿದ್ದೇವೆ. ಅಲ್ಲಿನ ನಿವಾಸಿಗಳು ಮತ್ತು ಅಭ್ಯರ್ಥಿಗಳಿಗೂ ತಿಳಿ ಹೇಳುವ ಕೆಲಸ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಓದಿ: ಬೆಳಗಾವಿ ಪಾಲಿಕೆ ಚುನಾವಣೆ: ಮಧ್ಯರಾತ್ರಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್