ಚಿಕ್ಕೋಡಿ (ಬೆಳಗಾವಿ): ಅಥಣಿ ತಾಲೂಕಿನ ಕೊಟ್ಟಲಗಿ ಗ್ರಾಮದಲ್ಲಿ ಸಮಯಕ್ಕೆ ಸರಿಯಾಗಿ ಬಸ್ಸುಗಳು ಬರುತ್ತಿಲ್ಲ ಎಂದು ವಿದ್ಯಾರ್ಥಿಗಳು ಅಥಣಿ-ಕನಮಡಿ ಬಸ್ ತಡೆದು ಪ್ರತಿಭಟನೆ ನಡೆಸಿದರು.
ಕೊಟ್ಟಲಗಿ ಗ್ರಾಮ ತಾಲೂಕಿನ ಕೊನೆಯ ಹಳ್ಳಿಯಾಗಿದ್ದು, ಬಸ್ಸುಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಾಚರಣೆ ಮಾಡಿದರೆ ಮಾತ್ರ ಪ್ರಯಾಣಿಕರಿಗೆ ಅನುಕೂಲವಾಗುತ್ತದೆ. ಇನ್ನೂ ದಿನನಿತ್ಯ ಬಸ್ಸುಗಳಲ್ಲಿ ಹೆಚ್ಚಿನ ಪ್ರಯಾಣಿಕರನ್ನು ತುಂಬಿಕೊಳ್ಳುತ್ತಿದ್ದು ವಿದ್ಯಾರ್ಥಿಗಳು ಪುಟ್ ಬೋರ್ಡನಲ್ಲಿ ನಿಂತು ಪ್ರಯಾಣ ಮಾಡುವ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಇದರಿಂದ ಏನಾದರೂ ಅಪಘಾತವಾದರೆ ಅಧಿಕಾರಿಗಳು ಹೊಣೆಯಾಗಬೇಕಾಗುತ್ತದೆ. ಸುರಕ್ಷಿತ ಪ್ರಯಾಣಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಹೆಚ್ಚುವರಿ ಬಸ್ ಕಾರ್ಯಾಚರಣೆ ಮಾಡಬೇಕು ಹಾಗೂ ಅಥಣಿ ಘಟಕದ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು ಸ್ಥಳಕ್ಕೆ ಬರುವಂತೆ ವಿದ್ಯಾರ್ಥಿಗಳು ಹಾಗೂ ಸ್ಥಳಿಯರು ಆಗ್ರಹಿಸಿದರು.
ಈ ವೇಳೆ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ವಿದ್ಯಾರ್ಥಿಗಳ ಮನವಿ ಆಲಿಸಿ ಮುಂದಿನ ವಾರದಿಂದ ಬಸ್ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ಇದನ್ನೂ ಓದಿ : ಗದಗದಲ್ಲಿ ಬಸ್ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ