ಬೆಳಗಾವಿ: ಸೋಂಕಿನಿಂದ ಗುಣಮುಖರಾಗಿ ಕೋವಿಡ್ ಆರೈಕೆ ಕೇಂದ್ರದಿಂದ ಮನೆಗೆ ಹೊರಟ ಜನರಿಗೆ ಸಸಿಗಳನ್ನು ನೀಡುವ ಮೂಲಕ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಬೀಳ್ಕೊಟ್ಟರು. ಇಲ್ಲಿನ ಕುಮಾರಸ್ವಾಮಿ ಲೇಔಟ್ನಲ್ಲಿರುವ ಕೋವಿಡ್ ಆರೈಕೆ ಕೇಂದ್ರದಲ್ಲಿ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ 7 ಜನರನ್ನು ಇಂದು ಡಿಸ್ಚಾರ್ಜ್ ಮಾಡಲಾಯಿತು.
ಕೋವಿಡ್ ಸೋಂಕಿತರನ್ನು ಸರ್ಕಾರದ ಮಾರ್ಗಸೂಚಿ ಪ್ರಕಾರ ಕೋವಿಡ್ ಕೇರ್ ಸೆಂಟರ್ಗಳಿಗೆ ದಾಖಲಿಸಿ ಔಷಧೋಪಚಾರ ಹಾಗೂ ಊಟೋಪಹಾರ ವ್ಯವಸ್ಥೆ ಕಲ್ಪಿಸಲಾಗಿತ್ತು. ಈ ಕೇಂದ್ರದಲ್ಲಿ ಚಿಕಿತ್ಸೆ ಪಡೆದು ಸಂಪೂರ್ಣ ಗುಣಮುಖರಾದ 7 ಜನರನ್ನು ಇಂದು ಬಿಡುಗಡೆಗೊಳಿಸಲಾಯಿತು. ಈ ಸಂದರ್ಭ ಹಾಜರಿದ್ದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೂವು ಮತ್ತಿತರ ಸಸಿಗಳನ್ನು ನೀಡಿ ಶುಭ ಕೋರಿ ಬೀಳ್ಕೊಟ್ಟರು.
ಬಳಿಕ ಮಾತನಾಡಿದ ಅವರು, ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆ ಮತ್ತು ಲಕ್ಷಣ ರಹಿತ ಸೋಂಕಿತರಿಗೆ ಕೋವಿಡ್ ಕೇರ್ ಕೇಂದ್ರದಲ್ಲಿ ಪ್ರತ್ಯೇಕವಾಗಿರಿಸಿ ಆರೈಕೆ ಮಾಡಲು ಎಲ್ಲ ರೀತಿಯ ಸೌಲಭ್ಯಗಳನ್ನು ಸರ್ಕಾರದಿಂದ ಕಲ್ಪಿಸಲಾಗಿದೆ. ಆಯಾ ತಾಲೂಕು ಮತ್ತು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇರುವ ವಸತಿ ನಿಲಯಗಳಲ್ಲಿ ಸುಸಜ್ಜಿತ ಕೋವಿಡ್ ಕೇರ್ ಕೇಂದ್ರಗಳನ್ನು ಆರಂಭಿಸಲಾಗಿದ್ದು, ಲಕ್ಷಣ ರಹಿತ ಸೋಂಕಿತರು ಇವುಗಳ ಪ್ರಯೋಜನ ಪಡೆಯುವಂತೆ ತಿಳಿಸಿದರು.
ಸರ್ಕಾರದ ಮಾರ್ಗಸೂಚಿ ಪ್ರಕಾರ ಲಕ್ಷಣ ರಹಿತ ಸೋಂಕಿತರಿಗೆ ಔಷಧಿಗಳ ಜತೆಗೆ ಅತ್ಯುತ್ತಮ ಆಹಾರ ನೀಡಲಾಗುತ್ತಿದೆ. ಆದ್ದರಿಂದ ಸೋಂಕು ದೃಢಪಟ್ಟಾಗ ಯಾವುದೇ ಭಯ-ಆತಂಕವಿಲ್ಲದೇ ಕೋವಿಡ್ ಕೇರ್ ಕೇಂದ್ರಗಳಿಗೆ ಸ್ವಯಂಪ್ರೇರಣೆಯಿಂದ ದಾಖಲಾಗಬೇಕು ಎಂದು ಅವರು ತಿಳಿಸಿದರು.