ಅಥಣಿ (ಬೆಳಗಾವಿ) : ಇಂದು ದೇಶವ್ಯಾಪಿ ಕರೆ ನೀಡಲಾಗಿದ್ದ ಭಾರತ ಬಂದ್ ಹಿನ್ನೆಲೆಯಲ್ಲಿ, ಪಟ್ಟಣದಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿಯವರ ಪೋಟೋ ಹಿಡಿದು, ಪೀಪಿ ಊದುತ್ತ ಬೈಕ್ ರ‍್ಯಾಲಿ ಮೂಲಕ ವಿಭಿನ್ನವಾಗಿ ಪ್ರತಿಭಟಿಸಿದರು.
ಬಿಸಿಯೂಟ ಹಾಗೂ ಅಂಗನವಾಡಿ ಕಾರ್ಯಕರ್ತರು, ಗುತ್ತಿಗೆ ಪೌರ ಕಾರ್ಮಿಕರ ಸಂಘಟನೆಯವರು ಸೇರಿದಂತೆ 10ಕ್ಕೂ ಹೆಚ್ಚು ಸಂಘಟನೆಯವರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಪ್ರತಿಭಟನಾಕಾರರು ಪಟ್ಟಣದ ಸಿದ್ದೇಶ್ವರ ದೇವಾಲಯದಿಂದ ಪಾದಯಾತ್ರೆ ಮೂಲಕ ತೆರಳಿ ಅಂಬೇಡ್ಕರ್ ವೃತ್ತದ ಬಳಿ ಜಮಾಯಿಸಿದರು. ಬಳಿಕ ಪ್ರಧಾನಿ ಮೋದಿ ಭಾವಚಿತ್ರದ ಮುಂದೆ ಪೀಪಿ ಊದಿ ಆಕ್ರೋಶ ಹೊರಹಾಕಿದರು.
ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಅವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಅಹವಾಲು ಸ್ವೀಕರಿಸಿ, ಬೇಡಿಕೆ ಬಗ್ಗೆ ಮುಖ್ಯಮಂತ್ರಿ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು. ಬಳಿಕ ಅಥಣಿ ತಹಶೀಲ್ದಾರ್ ಕೂಡ ಆಗಮಿಸಿ ಮನವಿ ಪತ್ರ ಸ್ವೀಕರಿಸಿದರಲ್ಲದೆ, ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಕಳಿಸುತ್ತೇನೆ ಎಂದು ತಿಳಿಸಿದರು.
ಮುಷ್ಕರ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಡಿವೈಎಸ್ಪಿ ಎಸ್.ವಿ.ಗಿರೀಶ್ ನೇತೃತ್ವದಲ್ಲಿ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿತ್ತು.