ಬೆಳಗಾವಿ : ಬಿಮ್ಸ್ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನರ್ಸ್ಗಳು, ಸಿಬ್ಬಂದಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರಿನ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಜಿಲ್ಲಾಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ನಾವು ಸರ್ಕಾರಕ್ಕೆ ಹಲವು ಬೇಡಿಕೆಗಳನ್ನು ಈಡೇರಿಸಬೇಕೆಂದು ಮನವಿ ಮಾಡಿಕೊಂಡ್ರೂ ಸರ್ಕಾರ ನಮ್ಮ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಕೇವಲ ₹10 ಸಾವಿರ ವೇತನದಲ್ಲಿ ಕೆಲಸ ಮಾಡಲಾಗುತ್ತಿದೆ. ಕೊರೊನಾ ವೈರಸ್ ವಿರುದ್ಧದ ಯುದ್ಧದಲ್ಲಿ ಹಗಲು-ರಾತ್ರಿ ಕೆಲಸ ಮಾಡಲಾಗುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ಎಲ್ಲಾ ಸೌಲಭ್ಯಗಳ ಜೊತೆಗೆ ಪರಿಹಾರ ಘೋಷಣೆ ಮಾಡಬೇಕು. ಕಳೆದ 10 ವರ್ಷಗಳಿಂದ ನಿರಂತರವಾಗಿ ಕೆಲಸ ನಿರ್ವಹಿಸುತ್ತಿದ್ದೇವೆ.
ಆದರೆ, ನಮ್ಮ ಕಷ್ಟಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ. ಇನ್ನು, ಬಿಮ್ಸ್ ಆಸ್ಪತ್ರೆಯಲ್ಲಿ ಕೋವಿಡ್-19 ವಿರುದ್ಧ ನಾವು ಕೆಲಸ ಮಾಡಿದ್ದೇವೆ. ಆದ್ದರಿಂದ ನಮ್ಮನ್ನು ಖಾಯಂಗೊಳಿಸಿ ಮತ್ತು ವೇತನ ಹೆಚ್ಚಿಸಬೇಕು. ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.