ಬೆಳಗಾವಿ : ಮಹಾನಗರ ಪಾಲಿಕೆ ಬಿಜೆಪಿ ಚುನಾವಣಾ ಉಸ್ತುವಾರಿಗಳಾಗಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹಾಗೂ ಶಾಸಕ ಅಭಯ್ ಪಾಟೀಲರನ್ನು ನೇಮಿಸಲಾಗಿದೆ.
ಈ ಕುರಿತು ಆದೇಶ ಹೊರಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಾಜ್ಯದಲ್ಲಿ ನಡೆಯಲಿರುವ ಮೂರು ಮಹಾನಗರ ಪಾಲಿಕೆಗಳ ಚುನಾವಣೆಗೆ ರಾಜ್ಯಮಟ್ಟದ ಉಸ್ತುವಾರಿಯಾಗಿ ಪಕ್ಷದ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಮಹಾನಗರ ಪಾಲಿಕೆಗಳಿಗೆ ಪ್ರತ್ಯೇಕ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ, ಬೆಳಗಾವಿ ಮಹಾನಗರ ಪಾಲಿಕೆಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮತ್ತು ಶಾಸಕ ಅಭಯ್ ಪಾಟೀಲ್, ಕಲಬುರಗಿ ಮಹಾನಗರ ಪಾಲಿಕೆಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಅವರನ್ನು ನೇಮಿಸಲಾಗಿದೆ. ಇವರೊಂದಿಗೆ ಕ್ಷೇತ್ರಗಳ ಸಂಸದರು, ಶಾಸಕರು ಮತ್ತು ಪಕ್ಷದ ಪ್ರಮುಖರು ಈ ಚುನಾವಣೆಗಳ ತಂಡದಲ್ಲಿ ಕೆಲಸ ಮಾಡಲಿದ್ದಾರೆ ಎಂದು ನಳಿನ್‍ಕುಮಾರ್ ಕಟೀಲ್ ಹೇಳಿದ್ದಾರೆ.
ಚುನಾವಣಾ ತಂತ್ರದ ಬಗ್ಗೆ ಸಭೆ : ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಟ್ಟು 58 ವಾರ್ಡ್ಗಳು ಒಳಪಡುತ್ತವೆ. ಈ ಬಾರಿ ಪಕ್ಷದ ಚಿಹ್ನೆಯ ಆಧಾರದ ಮೇಲೆ ಚುನಾವಣೆ ಎದುರಿಸಲು ಬಿಜೆಪಿ ಸನ್ನದ್ಧವಾಗಿದೆ. ರಾಜ್ಯ ಮಟ್ಟದ ರಾಜಕಾರಣ ಒಂದು ರೀತಿಯಾದರೆ, ಬೆಳಗಾವಿ ರಾಜಕಾರಣ ಇನ್ನೊಂದು ರೀತಿ ಇದೆ. ಹಾಗಾಗಿ ಪಾಲಿಕೆಯಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ಶ್ರಮ ಪಡಿಬೇಕಿದೆ. ಈ ಕಾರಣಕ್ಕೆ ಚುನಾವಣಾ ಪೂರ್ವ ಸಿದ್ಧತೆ ಸಭೆ ನಡೆಸಲು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇಂದು ಬೆಳಗಾವಿಗೆ ಆಗಮಿಸುತ್ತಿದ್ದಾರೆ.