ಬೆಳಗಾವಿ: ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಸಿಗಳನ್ನು ನೆಡುವ ಮೂಲಕ ಬಿಜೆಪಿ ಕಾರ್ಯಕರ್ತರು ತಮ್ಮ ಸಾಮಾಜಿಕ ಬದ್ಧತೆಯನ್ನು ವ್ಯಕ್ತಪಡಿಸಿರುವುದು ಹೆಮ್ಮೆಯ ಸಂಗತಿ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.
ನಗರದ ಗ್ರಾಮೀಣ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ಹಿಂಡಲಗಾ ಗ್ರಾಮದಲ್ಲಿ ಪರಿಸರ ಜಾಗೃತಿಗಾಗಿ ಸಸಿ ನೆಡುವ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸಸಿ ನೆಟ್ಟು, ಬಳಿಕ ಬಿಜೆಪಿ ಕಾರ್ಯಕರ್ತರಿಗೆ ಸಸಿಗಳನ್ನು ವಿತರಿಸಿ ಮಾತನಾಡಿದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ರಾಜ್ಯದಲ್ಲಿ 58 ಸಾವಿರ ಮತಗಟ್ಟೆಗಳಲ್ಲಿ ಪ್ರತಿ ಮತಗಟ್ಟೆಗೆ 5 ಸಸಿ ನೆಡುವ ಮೂಲಕ ಒಟ್ಟು 3 ಲಕ್ಷ ಸಸಿಗಳನ್ನು ನೆಡಲಾಗುತ್ತಿದೆ. ಬಿಜೆಪಿಯ ಒಬ್ಬ ಕಾರ್ಯಕರ್ತನಿಗೆ ಒಂದು ಸಸಿಯನ್ನು ಲಾಲನೆ ಪಾಲನೆ ಮಾಡುವ ಹೊಣೆಗಾರಿಕೆ ನೀಡಲಾಗಿದೆ. ಹಸಿರು ಉಸಿರು ಎಂದು ಭಾವಿಸಿ ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ತಮ್ಮನ್ನು ಈ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಸಾಮಾಜಿಕ ಕಳಕಳಿಯನ್ನು ಎತ್ತಿತೋರಿಸುತ್ತಿದೆ ಎಂದು ಅಭಿಪ್ರಾಯಪಟ್ಟರು.
ಜಿಲ್ಲಾ ಗ್ರಾಮೀಣ ಘಟಕದ ಅಧ್ಯಕ್ಷ ಸಂಜಯ ಪಾಟೀಲ, ಪ್ರಧಾನ ಕಾರ್ಯದರ್ಶಿ ರಾಜು ಚಿಕ್ಕನಗೌಡರ, ಮಹೇಶ ಮೊಹತೆ, ಬಿಜೆಪಿ ಗ್ರಾಮೀಣ ಮಂಡಳ ಅಧ್ಯಕ್ಷ ಧನಂಜಯ ಜಾಧವ, ಜಿಲ್ಲಾ ಯುವ ಮೋರ್ಚಾ ಮಾಜಿ ಅಧ್ಯಕ್ಷ ಈರಣ್ಣ ಅಂಗಡಿ, ನಗರ ಘಟಕದ ಅಧ್ಯಕ್ಷ ಶಶಿ ಪಾಟೀಲ ಇದ್ದರು.