ಚಿಕ್ಕೋಡಿ: ಇತಿಹಾಸ ಗೊತ್ತಿಲ್ಲದ ಬಿಜೆಪಿ ನಾಯಕರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ, ಮೊದಲು ಇದನ್ನು ನಿಲ್ಲಿಸಬೇಕು. ಸಂವಿಧಾನದಿಂದಲೇ ಸಚಿವ ಸಿ.ಟಿ. ರವಿ ಸೇರಿದಂತೆ ಅನೇಕ ಬಿಜೆಪಿ ನಾಯಕರು ರಾಜಕೀಯದ ಚುಕ್ಕಾಣಿ ಹಿಡಿದಿದ್ದಾರೆ. ಅಧಿಕಾರ ಪಡೆದುಕೊಂಡು ಇದೀಗ ಸಂವಿಧಾನ ಬದಲಾಯಿಸುವ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮಹಾವೀರ ಮೋಹಿತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಸಂವಿಧಾನ ಜಾರಿ ಸಂದರ್ಭದಲ್ಲಿ ಹಿಂದೂಪರ ಸಂಘಟನೆ ಹಾಗೂ ಆರ್ಎಸ್ಎಸ್ ಸಂಘಟನೆ ಬಲಾಢ್ಯವಾಗಿರಲಿಲ್ಲ. ಅಂತಹ ಸಂದರ್ಭದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನವನ್ನು ರಚನೆ ಮಾಡಿದ್ದಾರೆ. ಸಚಿವ ಸಿ.ಟಿ. ರವಿ ಸಂವಿಧಾನದ ಬಗ್ಗೆ ಬೇಜವಾಬ್ದಾರಿ ಹೇಳಿಕೆ ನೀಡುವ ಮೂಲಕ ಜನರ ದಿಕ್ಕು ತಪ್ಪಿಸುವ ಕಾರ್ಯ ಮಾಡುತ್ತಿದ್ದಾರೆ ಎಂದರು.
ಬಿಜೆಪಿ ನಾಯಕರು ಬಾಯಿಗೆ ಬೀಗ ಹಾಕಿಕೊಳ್ಳದಿದ್ದರೆ ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಇಂತವರ ವಿರುದ್ಧ ಉಗ್ರವಾದ ಹೋರಾಟ ಮಾಡಲಿದೆ ಎಂದು ಎಚ್ಚರಿಕೆ ನೀಡಿದರು. ಆಡಳಿತಾರೂಢ ಪಕ್ಷಗಳು ಅಭಿವೃದ್ಧಿಯತ್ತ ಗಮನ ಕೊಡಬೇಕು. ಇಲ್ಲದ ಹೇಳಿಕೆಗಳನ್ನು ನೀಡಬಾರದು. ಇಂತಹ ಹೇಳಿಕೆಗಳನ್ನು ಕೊಡುತ್ತಾ ಜನರ ಗಮನ ಬೇರೆಡೆ ಸೆಳೆಯುತ್ತಿದೆ ಎಂದು ಅವರು ಆರೋಪಿಸಿದರು.
ಸ್ವಾತಂತ್ರ್ಯಕ್ಕಾಗಿ ಯಾವ ಬಿಜೆಪಿ ನಾಯಕರು ಹೋರಾಟ ಮಾಡಿಲ್ಲ. ಆದರೆ, ಸಂವಿಧಾನವನ್ನು ಬದಲಾಯಿಸುವ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದು ದೇಶವನ್ನು ಒಡೆಯುವ ಕೆಲಸ. ಮೊದಲು ಈ ಕೆಲಸವನ್ನು ಬಿಜೆಪಿ ನಾಯಕರು ನಿಲ್ಲಿಸಬೇಕು ಎಂದು ಎಚ್ಚರಿಸಿದರು.