ಬೆಳಗಾವಿ: ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು ಐದು ವರ್ಷದ ಅವಧಿಯಲ್ಲಿ ಬಿಜೆಪಿಯ ಯಾವೊಬ್ಬ ನಾಯಕನ ಮನೆ ಮೇಲೆ ಐಟಿ ದಾಳಿ ನಡೆದಿಲ್ಲ. ಬಿಜೆಪಿಯಲ್ಲೂ ಹಣವಂತರು ಇದ್ದಾರೆ. ಅವರೇನು ಸಾಚಾಗಳಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಐಟಿ ದಾಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್-ಜೆಡಿಎಸ್ ನಾಯಕರನ್ನು ಕೇಂದ್ರೀಕರಿಸಿ ದಾಳಿಗಳು ನಡೆಯುತ್ತಿವೆ. ರಾಜಕೀಯ ಪ್ರೇರಿತ ದಾಳಿಗಳಿವು ಎಂಬುವುದು ದೇಶದ ಜನರಿಗೆ ಗೊತ್ತಾಗಿದೆ. ಕೇಂದ್ರದ ಅಂಗ ಸಂಸ್ಥೆಗಳನ್ನು ಬಿಜೆಪಿ ಸ್ವಾರ್ಥ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.
ಈ ಲೋಕಸಭೆ ಚುನಾವಣೆಯಲ್ಲಿ ದೇಶದಲ್ಲಿ ನರೇಂದ್ರ ಮೋದಿ ಅಲೆ ಇಲ್ಲ. ಕಳೆದ ಚುನಾವಣೆಯಲ್ಲಿ ಮಾತ್ರ ಮೋದಿ ಅಲೆ ಇತ್ತು. ಪ್ರಸ್ತುತ ಚುನಾವಣೆಯಲ್ಲಿ ಬಿಜೆಪಿ ಹಾಗೂ ಮೋದಿ ವಿರೋಧಿ ಅಲೆ ಇದೆ. ಹೀಗಾಗಿ ಬೆಳಗಾವಿಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.