ಬೆಳಗಾವಿ: ಹುಬ್ಬಳ್ಳಿಯಲ್ಲಿ ನಡೆದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿಯ ಬಂಧನ ಖಂಡಿಸಿ ಬಿಜೆಪಿ ವತಿಯಿಂದ ಬೆಳಗಾವಿಯಲ್ಲೂ ಪ್ರತಿಭಟನೆ ನಡೆಸಲಾಯಿತು.
ರಾಣಿ ಚೆನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ರ್ಯಾಲಿ ನಡೆಸಿದ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಈ ವೇಳೆ ಮಾತನಾಡಿದ ಸಂಸದೆ ಮಂಗಲ ಅಂಗಡಿ, 31 ವರ್ಷದ ಹಿಂದಿನ ಕೇಸ್ ಈಗ ತೆಗೆದು ಹಿಂದೂ ಕಾರ್ಯಕರ್ತರು ಮತ್ತು ರಾಮನ ಭಕ್ತರ ಮೇಲೆ ಕಾಂಗ್ರೆಸ್ ಸರ್ಕಾರ ದೌರ್ಜನ್ಯ ಮಾಡುತ್ತಿರುವುದು ಖಂಡನೀಯ. ಎಲ್ಲರೂ ರಾಮನ ಭಕ್ತರು. ಹಾಗಾಗಿ, ಸರ್ಕಾರ ಈ ರೀತಿ ಪೊಲೀಸರನ್ನು ದುರ್ಬಳಕೆ ಮಾಡಿಕೊಂಡು ಹಿಂದೂ ಕಾರ್ಯಕರ್ತರನ್ನು ಬಂಧಿಸಿರುವುದು ಸರಿಯಲ್ಲ ಎಂದು ಕಿಡಿಕಾರಿದರು.
ಬಿಜೆಪಿ ಮುಖಂಡ ಮಹಾಂತೇಶ ವಕ್ಕುಂದ ಮಾತನಾಡಿ, ಅಯೋಧ್ಯೆಯಲ್ಲಿ ರಾಮನ ಮೂರ್ತಿ ಪ್ರತಿಷ್ಠಾಪನೆ ಆಗುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಈ ರೀತಿ ದ್ವೇಷದ ರಾಜಕಾರಣ ಮಾಡುವುದನ್ನು ಬಿಜೆಪಿ ಸಹಿಸುವುದಿಲ್ಲ. 70 ವರ್ಷದ ಹಿಂದೂ ಕಾರ್ಯಕರ್ತನನ್ನು ಬಂಧಿಸುವ ಕೆಲಸ ಮಾಡುತ್ತಿದ್ದಾರೆ. ಕೂಡಲೇ ಹಿಂದೂ ಸಮಾಜದ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.
ಹಿಂದೂ ಕಾರ್ಯಕರ್ತರ ಮೇಲಿನ ಎಲ್ಲ ಪ್ರಕರಣಗಳನ್ನು ಹಿಂಪಡೆಯುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ನಿರ್ದೇಶನ ನೀಡುವಂತೆ ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಅವರ ಮೂಲಕ ರಾಜ್ಯಪಾಲರಿಗೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಶಾಸಕ ವಿಠಲ ಹಲಗೇಕರ್, ಮುಖಂಡರಾದ ಮುರುಘೇಂದ್ರಗೌಡ ಪಾಟೀಲ, ದಾದಾಗೌಡ ಬಿರಾದಾರ, ಎಫ್.ಎಸ್. ಸಿದ್ದನಗೌಡರ, ಪ್ರಮೋದ ಕೊಚೇರಿ, ಡಾ. ಸೋನಾಲಿ ಸರ್ನೋಬತ್ ಸೇರಿ ಮತ್ತಿತರರು ಇದ್ದರು.
ಬೆಂಗಳೂರಿನಲ್ಲಿ ಪ್ರತಿಭಟನೆ: ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿತು. ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ 48 ಗಂಟೆಗಳ ಗಡುವು ನೀಡುತ್ತಿದ್ದು, ಅಷ್ಟರಲ್ಲಿ ಶ್ರೀಕಾಂತ್ ಪೂಜಾರಿಯನ್ನು ಬಿಡುಗಡೆಗೊಳಿಸದೇ ಇದ್ದಲ್ಲಿ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಬಿಜೆಪಿ ಯುವ ಮೋರ್ಚಾ ಮುತ್ತಿಗೆ ಹಾಕಲಿದೆ. ಶ್ರೀಕಾಂತ್ ಪೂಜಾರಿಗೆ ನ್ಯಾಯ ಸಿಗುವವರೆಗೂ ಹೋರಾಟ ನಡೆಸಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಇದೇ ವೇಳೆ ಹೇಳಿದರು.
ಇದನ್ನೂ ಓದಿ: ನಾನು ದ್ವೇಷ ರಾಜಕಾರಣ ಮಾಡಲ್ಲ, ಅಪರಾಧ ಮಾಡಿದ್ರೆ ಕ್ರಮ ತೆಗೆದುಕೊಳ್ಳುತ್ತೇವೆ: ಸಿಎಂ ಸಿದ್ದರಾಮಯ್ಯ